Imd Weather Forecast: ಈ ಭಾಗಗಳಲ್ಲಿ 5 ದಿನ ಭಾರೀ ಮಳೆ: ಶೀತಗಾಳಿಯಿಂದ ಚಳಿ ಹೆಚ್ಚಳ: ಐಎಂಡಿ
Imd Weather Forecast: ದೇಶದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಲಿದ್ದು, ಇನ್ನೊಂದು ವಾರದ ಅವಧಿಗೆ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆ ಇರಲಿದೆ. ತಾಪಮಾನದಲ್ಲಿನ ಗಮನಾರ್ಹ ಕುಸಿತ ಕಂಡು ಬಂದಿದ್ದು, ಭಾರತದ ವಿವಿಧ ಭಾಗದಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಐಎಂಡಿ ವರದಿ ಮುನ್ಸೂಚನೆ ನೀಡಿದೆ. ಅಲ್ಲದೇ ಉತ್ತರ ಪ್ರದೇಶ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಪೂರ್ವ ರಾಜಸ್ಥಾನ ಭಾಗದಲ್ಲಿ ಚಳಿ ಪ್ರಮಾಣವು ಭಾರೀ ಹೆಚ್ಚಳವಾಗುವ ನಿರೀಕ್ಷೆ ಇದೆ.
ದಕ್ಷಿಣ ಭಾರತ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆಯೂ ಇದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ವಾರದಿಂದ ಮಳೆ ಆರ್ಭಟ ಇರಲಿದೆ. ಚಂಡಮಾರುತದ ಪ್ರಭಾವದಿಂದ ಮಳೆ ಬೀಳುವ ನಿರೀಕ್ಷೆ ಇದೆ. ದಕ್ಷಿಣ ಭಾರತದಲ್ಲಿನ ಪ್ರತಿಕೂಲ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಐಎಂಡಿ ಪ್ರಕಾರ, ನವೆಂಬರ್ 17 ರವರೆಗೆ ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನವೆಂಬರ್ 15 ಮತ್ತು 16 ರಂದು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಿಗೆ ಶೀತಗಾಳಿ ಹೆಚ್ಚಾಗಲಿದೆ ಎನ್ನುವ ಎಚ್ಚರಿಕೆಯನ್ನು ನೀಡಲಾಗಿದೆ. ಅದೇ ಅವಧಿಯಲ್ಲಿ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದಲ್ಲಿಯೂ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಳ: ಇನ್ನು ಉತ್ತರ ಭಾರತದ ದೆಹಲಿ ಸೇರಿದಂತೆ ಉತ್ತರ ಪ್ರದೇಶ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ಭಾಗದಲ್ಲಿ ಚಳಿ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಮತ್ತು ಮಧ್ಯ ಭಾರತದಾದ್ಯಂತ ತಾಪಮಾನ ಕುಸಿತ ಕಂಡಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಕನಿಷ್ಠ ತಾಪಮಾನ ತೀವ್ರವಾಗಿ ಇಳಿಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಆರು ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ಪಂಜಾಬ್, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಒಡಿಶಾದ ಹಲವಾರು ಭಾಗಗಳಲ್ಲಿ ಪ್ರಸ್ತುತ 7 ರಿಂದ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದ ವಿವಿಧ ಭಾಗದಲ್ಲಿ ಚಳಿ ಹೆಚ್ಚಳವಾಗಿದೆ.












Click it and Unblock the Notifications