IMD Weather Forecast: ಜೂನ್ 2ರ ವರೆಗೂ ಕಂಡುಕೇಳರಿಯದ ಮಳೆ ಮುನ್ಸೂಚನೆ
IMD Weather Forecast: ಅವಧಿಗೂ ಮುನ್ನ ಮುಂಗಾರು ಎಂಟ್ರಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ದೇಶದ ಹಲವೆಡೆ ರಣಮಳೆ ಸುರಿಯುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಜೂನ್ 2ರ ವರೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಕಂಡುಕೇಳರಿಯದ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 30ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 30ರ ವರೆಗೆ ಕೇರಳ ಮತ್ತು ಮಾಹೆ, ಮೇ 28 ಮತ್ತು 29ರಂದು ಕರಾವಳಿ ಆಂಧ್ರಪ್ರದೇಶ, ಯಾಣಂ ಮತ್ತು ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ ಐದು ದಿನಗಳ ಕಾಲ ಮಧ್ಯಪ್ರದೇಶ, ಬಿಹಾರ, ವಿದರ್ಭ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಸಿಕ್ಕಿಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇಂದು (ಮೇ 28) ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಆಂಧ್ರಪ್ರದೇಶದ ಕರಾವಳಿ, ಯಾಣಂ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಬಿರುಗಾಳಿ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಭಾರತದ ಹವಾಮಾನದ ವಿವರ: ಜೂನ್ 2ರ ವರೆಗೆ ಜಮ್ಮು ಮತ್ತು ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ನವದೆಹಲಿಯಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಬಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯಯಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳ ಜನರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿ ಬಾರಿಯೂ ಜೂನ್ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಎಂಟ್ರಿ ಕೊಡುತ್ತಿತ್ತು. ಆದರೆ, ಈ ಬಾರಿ ಅವಧಿಗೂ ಮುನ್ನವೇ ಎಂಟ್ರಿ ಕೊಟ್ಟಿದ್ದು, ಮಹಾರಾಷ್ಟ್ರದವರೆಗೂ ವ್ಯಾಪಿಸಿದೆ.
ಇನ್ನೂ ಕೆಲವು ದಿನಗಳಲ್ಲಿ ಇಡೀ ದೇಶ ಪೂರ್ತಿ ಆವರಿಸಿದರೂ ಆಶ್ಚರ್ಯವಿಲ್ಲ ಎನ್ನುವ ಮುನ್ಸೂಚನೆಯೂ ಇದೆ. ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೇಶದ ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿದ್ದವು. ಕೆರೆ-ಕಟ್ಟೆಗಳು, ನದಿಗಳು, ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿಹರಿದಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಅವಧಿಗೂ ಮುನ್ನವೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಈಗಾಗಲೇ ದಕ್ಷಿಣ ಭಾರತದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮುಂದಿನ ದಿನಗಳಲ್ಲಿ ಇನ್ನೇನು ಕಾದೈತೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.












Click it and Unblock the Notifications