IMD Weather Forecast: ಜೂನ್ 12ರ ವರೆಗೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ಈಗಾಗಲೇ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ದಿನಗಳಲ್ಲಿ ಹಲವೆಡೆ ಭಾರೀ ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ನಡುವೆಯೂ ಕೆಲವೆಡೆ ಮಾತ್ರ ಬಿಸಿಲಿನ ವಾತಾವರಣ ಮುಂದುವರೆಯಲಿದ ಎಂದು ಮುನ್ಸೂಚನೆ ನೀಡಿದೆ.

ಮುಂಬರುವ ದಿನಗಳಲ್ಲಿ ಉತ್ತರ ರಾಜ್ಯಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿ-ಎನ್‌ಸಿಆರ್, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 12 ರವರೆಗೆ ಪಶ್ಚಿಮ, ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನೆಲೆ ಯಾವುದೇ ಅನಾನುಕೂಲತೆಗಳನ್ನು ತಪ್ಪಿಸಲು ನಿವಾಸಿಗಳು ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ತಮ್ಮ ಪ್ರವಾಸಗಳನ್ನು ಮುಂದೂಡುವುದು ಒಳಿತು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ ವಿವರ: ಈಗಾಗಲೇ ಮೇ 16ರಿಂದ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಇಲ್ಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದ್ದು, ಇದರಿಂದ ಇಲ್ಲಿನ ನಿವಾಸಿಗಳು ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಗೆಯೇ ಮುಂದಿನ ಕೆಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಅದರಲ್ಲೂ ಜೂನ್ 9 ಮತ್ತು 10ರಂದು ಬಿಸಿಲಿನ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಜೂನ್ 12ರ ನಂತರ ಈ ಹವಾಮಾನ ಬದಲಾವಣೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 13ರಿಂದ ಅಂದರೆ ಶುಕ್ರವಾರದಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾದಾರಣ ಮಳೆಯಾಗುವ ಸಾಧ್ಯತೆ ಇದ್ದು, ಜೊತೆಗೆ ಅಲ್ಪ ಪ್ರಮಾಣದ ಗಾಳಿಯೂ ಇರಲಿದ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಒಂದು ವೇಳೆ ಮಳೆಯಾದ್ರೆ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ ಎಂದು ತಿಳಿಸಿದೆ.
ಮುಂದಿನ ಹಲವು ದಿನಗಳ ಕಾಲ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆಯೂ ಗುರುವಾರದಿಂದ ಪೂರ್ವ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ. ಇದರಿಂದ ಬಿಸಿಲಿನ ತಾಪದಿಂದ ಮುಕ್ತಿ ಸಿಕ್ಕಂತಾಗಲಿದೆ. ಅಲ್ಲದೆ ಶನಿವಾರ ಬಿಹಾರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಅವಧಿಗೂ ಮುನ್ನ ಮುಂಗಾರು ಎಂಟ್ರಿ ಪರಿಣಾಮ, ಈಗಾಗಲೇ ದಕ್ಷಿಣ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ ಮತ್ತು ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications