IMD Weather Forecast: ಮೇ 20ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಉಂಟಾದ ಕಾರಣ ಹಲವೆಡೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಶಕ್ತಿ ಚಂಡಮಾರುತ ಹಿನ್ನೆಲೆ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ಆರೆಂಜ್, ಇನ್ನೂ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಂಡಮಾರುತ ಪರಿಣಾಮ ಛತ್ತೀಸ್‌ಗಢ, ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಗುರುವಾರ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆಯ ಪ್ರಕಾರ, ಮೇ 16ರವರೆಗೆ ತಮಿಳುನಾಡು ಮತ್ತು ಪುದುಚೇರಿ, ಮೇ 18ರ ವರೆಗೆ ಉತ್ತರ ಕರ್ನಾಟಕ, ಮೇ 15ರಿಂದ 18ರ ವರೆಗೆ ಕರ್ನಾಟಕದ ದಕ್ಷಿಣ ಭಾಗ, ಆಂಧ್ರಪ್ರದೇಶದ ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ, ಮೇ 18ರಿಂದ 20ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಮೇ 18ರಿಂದ 20ರ ವರೆಗೆ ಎಲ್ಲೆಲ್ಲಿ ಮಳೆ?: ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಮೇ 18ರಿಂದ 20ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮೇ 18ರ ವರೆಗೆ ಅರುಣಾಚಲ ಪ್ರದೇಶ, ಮೇ 15ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ, ಮೇ 15 ಮತ್ತು 16ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಭಾರತದ ಹವಾಮಾನ: ಮೇ 18ರ ವರೆಗೆ ಗೋವಾ ಮತ್ತು ಮಹಾರಾಷ್ಟ್ರ, ಮೇ 15ರಂದು ಗುಜರಾತ್‌ನಲ್ಲಿ ಗುಡುಗು. ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಮಧ್ಯ ಭಾರತದ ಹವಾಮಾನ ನೋಡೋದಾದ್ರೆ, ಮುಂದಿನ 5 ದಿನ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ, ಮೇ 15ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ರವಾನಿಸಿದೆ.
ಈಗಾಗಲೇ ದೇಶದ ಹಲವೆಡೆ ನೈರುತ್ಯ ಮನ್ಸೂನ್ ಆರಂಭ ಆಗಿದೆ. ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ನೋಡೋದಾದ್ರೆ, ಬಿಸಿಲಿನ ಬೇಗೆಯಿಂದ ಬೆಂದ ಜನರಿಗೆ ತಂಪೆರೆದಂತಾಗಿದೆ. ಹಾಗೆಯೇ ಇದೀಗ ಚಂಡಮಾರುತ ಪರಿಣಾಮ ಮಳೆ ಬಹುತೇಕ ಜಿಲ್ಲೆಗಳಿಗೆ ಆವರಿಸುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಮೇ 18ರ ವರೆಗೆ ಪಶ್ಚಿಮ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ತಾಪಮಾನ ಮುಂದುವರೆಯಲಿದೆ. ಅಷ್ಟೇ ಅಲ್ಲದೆ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನದಲ್ಲಿ ಮೇ 17ರ ವರೆಗೆ ಇದೇ ರೀತಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮತ್ತೊಂದೆಡೆ ಕಳೆದ ಬಾರಿಯಂತೆ ಈ ಬಾರಿಯೂ ಮುಂಗಾರು ಎಂಟ್ರಿ ಕೊಟ್ಟು ಅಬ್ಬರಿಸಲಿದೆ ಎನ್ನುವ ಮುನ್ಸೂಚನೆಯೂ ಇದೆ.












Click it and Unblock the Notifications