IMD Weather Forecast: ವಾಯುವ್ಯ ಭಾರತದ ಹಲವು ರಾಜ್ಯಗಳಲ್ಲಿ ಮೂರು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಶೀತಗಾಳಿ ಮುಂದರೆದಿದೆ. ಈ ನಡುವೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಫೆಬ್ರವರಿ 1 ಮತ್ತು ಫೆಬ್ರವರಿ 3ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದ್ದು, ಗಾಳಿಯ ವೇಗ ಗಂಟೆಗೆ 30ರಿಂದ 40 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ಫೆಬ್ರವರಿ 1ರ ಸಂಜೆ ವೇಳೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಹಿತ ಹಗುರ ಮಳೆ ಜೊತೆ ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ನಿಂದ 19 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಕನಿಷ್ಠ ತಾಪಮಾನವು 10ರಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಬಹುದು ಎಂದು ಮುನ್ಸೂಚನೆ ನೀಡಿದೆ.
ಇಂದು ಎಲ್ಲೆಲ್ಲಿ ಮಳೆ?: ದೆಹಲಿಯ ನರೆಲಾ, ಬವಾನಾ, ಎನ್‌ಸಿಆರ್‌ನ ಲೋನಿ ದೇಹಾತ್, ಗಾಜಿಯಾಬಾದ್, ಛಪ್ರೌಲಾ, ದಾದ್ರಿ, ಗ್ರೇಟರ್ ನೋಯ್ಡಾ ಮತ್ತು ಬಲ್ಲಭಗಢ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ: ಫೆಬ್ರವರಿ 1ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹರಿಯಾಣ, ಚಂಡೀಗಢ ಮತ್ತು ದೆಹಲಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮೂರು ದಿನ ಮಳೆ: ಫೆಬ್ರವರಿ 1ರಿಂದ 3ರ ವರೆಗೆ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ರಾಜಸ್ಥಾನ, ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಹಿಮಾಲಯದಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಹಿಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಭಾಗಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುತ್ತಿದ್ದು, ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಕೆಲವೇ ದಿನಗಳಲ್ಲಿ ಚಳಿ ಪ್ರಮಾಣ ಸಂಪೂರ್ಣವಾಗಿ ತಗ್ಗಲಿದ್ದು, ಬಿಸಿಲಿನ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ನಡುವೆಯೇ ಕೆಲವೆಡ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ. ಅದರಲ್ಲೂ ಉತ್ತರದ ದೆಹಲಿ ಸೇರಿದಂತೆ ವಾಯುವ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಇದಾದ ಬಳಿಕ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಎಂಟ್ರಿ ಕೊಡುವ ಸಾಧ್ಯತೆಯಿದೆ. ಮೊದಲಿನಿಂದಲೂ ಆರಂಭದಲ್ಲಿ ಮುಂಗಾರು ಮೊದಲು ಎಂಟ್ರಿ ಕೊಡುವುದೇ ಕೇರಳಕ್ಕೆ. ಅದೇ ರೀತಿಯಲ್ಲಿ ಈ ಬಾರಿಯೂ ಸಹ ವಾಡಿಕೆಯಂತೆ ಜೂನ್ ಮುಂಚೆಯೇ ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ನಂತರ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಸದ್ಯ ಇದೀಗ ದಕ್ಷಿಣದ ಯಾವುದೇ ರಾಜ್ಯಗಳಿಗೆ ಮಳೆಯ ಮುನ್ಸೂಚನೆ ಇಲ್ಲ.












Click it and Unblock the Notifications