ಭಾರತದಲ್ಲಿ 30 ರಿಂದ 14 ಲಕ್ಷಕ್ಕೆ ಇಳಿದ ಕೊರೊನಾ ಲಸಿಕೆ ವಿತರಣೆ!
ನವದೆಹಲಿ, ಮೇ 17: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆ ನಡುವೆಯೂ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣದಲ್ಲಿ ಭಾರಿ ಇಳಿಮುಖವಾಗಿದೆ. ಪ್ರತಿನಿತ್ಯ 30 ರಿಂದ 35 ಲಕ್ಷ ಜನರಿಗೆ ನೀಡುತ್ತಿದ್ದ ಲಸಿಕೆ ಪ್ರಮಾಣವು 14 ಲಕ್ಷಕ್ಕೆ ಇಳಿಕೆಯಾಗಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 122 ದಿನಗಳಲ್ಲಿ 18,44,22,218 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸೋಮವಾರ ರಾತ್ರಿ 8 ಗಂಟೆ ವೇಳೆಗೆ 14,79,592 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 12,42,929 ಜನರಿಗೆ ಮೊದಲ ಡೋಸ್ ಹಾಗೂ 2,36,663 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:
ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 59,32,704 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,58,913 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,52,200 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,44,97,411 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,16,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.












Click it and Unblock the Notifications