ಭಾರತದಲ್ಲಿ ಒಂದೇ ದಿನ 12.79 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಮೇ 19: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಬಹುತೇಕ ವೇಗವನ್ನು ಕಳೆದುಕೊಂಡಿದೆ. 135 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಒಂದು ದಿನಕ್ಕೆ 15 ಲಕ್ಷಕ್ಕಿಂತಲೂ ಕಡಿಮೆ ಜನರಿಗೆ ಕೊವಿಡ್-19 ಲಸಿಕೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 123 ದಿನಗಳಲ್ಲಿ 18,57,66,518 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರ ರಾತ್ರಿ 8 ಗಂಟೆ ವೇಳೆಗೆ 12,79,896 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 10,96,815 ಜನರಿಗೆ ಮೊದಲ ಡೋಸ್ ಹಾಗೂ 1,83,081 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:
ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 64,60,624 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,73,302 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,58,820 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,45,65,255 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,29,693 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,80,37,874 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 93,49,575 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,48,13,626 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,79,77,749 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications