ಭಾರತದಲ್ಲಿ ಪ್ರತಿಗಂಟೆಗೆ 2 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ!
ನವದೆಹಲಿ, ಜುಲೈ 23: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರದಿಂದ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ. ಇದರ ಮಧ್ಯೆ ಎಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎನ್ನುವುದರ ಕುರಿತು ಮಾಹಿತಿಗಾಗಿ ಮುಂದೆ ಓದಿ.
ಕಳೆದೊಂದು ದಿನದಲ್ಲಿ ಪ್ರತಿ ಗಂಟೆಗೆ 2 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 188 ದಿನಗಳೇ ಕಳೆದಿದ್ದು, ಈವರೆಗೂ 42 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರ ರಾತ್ರಿ 7 ಗಂಟೆ ವೇಳೆಗೆ 48,86,103 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 42,34,17,030 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

18-44 ವಯೋಮಾನದವರಿಗೆ ಲಸಿಕೆ ವಿತರಣೆ:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಸೋಮವಾರ ಒಂದೇ ದಿನ 18 ರಿಂದ 44 ವಯೋಮಾನದ 23,62,689 ಜನರಿಗೆ ಮೊದಲ ಡೋಸ್ ಹಾಗೂ 2,14,281 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 13,29,60,281 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 55,40,162 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.
ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು ಯಾವುವು?
ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.












Click it and Unblock the Notifications