ಭಾರತ: 102 ದಿನಗಳ ನಂತರ ಕೊರೊನಾವೈರಸ್ ದಾಖಲೆ ಇಳಿಕೆ
ನವದೆಹಲಿ, ಜೂನ್ 29: ಭಾರತದಲ್ಲಿ102 ದಿನಗಳ ನಂತರ ಮೊದಲ ಬಾರಿಗೆ ಕೊರೊನಾವೈರಸ್ ಸೋಂಕಿತರ ಸಂಖ್ಯೆ 40,000ಕ್ಕಿಂತ ಕಡಿಮೆಯಾಗಿದೆ. ಕೊವಿಡ್-19 ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.96.87ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 37,566 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 907 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 56,994 ಸೋಂಕಿತರು ಗುಣಮುಖರಾಗಿದ್ದಾರೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,03,16,897 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,93,66,601 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 3,97,637 ಮಂದಿ ಬಲಿಯಾಗಿದ್ದಾರೆ. ಇದರ ಹೊರತಾಗಿ 5,52,659 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಒಂದೇ ದಿನ 40 ಕೋಟಿ ಜನರಿಗೆ ಪರೀಕ್ಷೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,68,008 ಜನರ ಮಾದರಿಯನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 40,81,39,287 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ದೇಶದಲ್ಲಿ ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.












Click it and Unblock the Notifications