ಕೋವಿಡ್ ಮೇಲೆ ತೀವ್ರ ನಿಗಾ, ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ: ಕೇಂದ್ರ ಸರ್ಕಾರ
ನವದೆಹಲಿ, ಡಿಸೆಂಬರ್ 22: ಚೀನಾದಲ್ಲಿ ತೀವ್ರ ತಲ್ಲಣ ಸೃಷ್ಟಿರುವ ಕೋವಿಡ್‌ನ ಹೊಸ ರೂಪಾಂತರ ಭಾರತದಲ್ಲೂ ಕಂಡುಬಂದಿದೆ.
ಈ ವಿಚಾರವಾಗಿ ಸಂಸತ್‌ನಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಚೀನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಕೇಂದ್ರವು ಹೊಸ ಕೋವಿಡ್ -19 ರೂಪಾಂತರಗಳ ಮೇಲೆ ನಿಗಾ ಇರಿಸಿದೆ ಎಂದು ಹೇಳಿದ್ದಾರೆ.
ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

'ನಾವು ಜಾಗತಿಕ ಕೋವಿಡ್ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೋವಿಡ್ -19 ಹೊಸ ರೂಪಾಂತರವನ್ನು ಸಮಯೋಚಿತವಾಗಿ ಗುರುತಿಸಲು ಜೀನೋಮ್-ಸೀಕ್ವೆನ್ಸಿಂಗ್ ಅನ್ನು ಹೆಚ್ಚಿಸಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ' ಎಂದು ಸಚಿವರು ಹೇಳಿದ್ದಾರೆ.
ಕೋವಿಡ್ -19 ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ನಿರ್ವಹಿಸುವಲ್ಲಿ ಆರೋಗ್ಯ ಸಚಿವಾಲಯವು ಪೂರ್ವಭಾವಿ ಸಿದ್ದತೆ ಮಾಡಿಕೊಂಡಿದೆ. ವೈರಸ್ ವಿರುದ್ಧದ ಹೋರಾಟದಲ್ಲಿ ರಾಜ್ಯಗಳಿಗೆ ಹಣಕಾಸಿನ ನೆರವು ನೀಡಲಿದ್ದೇವೆ ಎಂದಿದ್ದಾರೆ.
ಇಲ್ಲಿಯವರೆಗೆ 220 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

'ಕಳೆದ ಕೆಲವು ದಿನಗಳಿಂದ, ವಿಶ್ವದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಭಾರತದಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿವೆ. ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಸಾವುಗಳನ್ನು ನಾವು ಗಮನಿಸುತ್ತಿದ್ದೇವೆ' ಎಂದು ಅವರು ಸದನಕ್ಕೆ ತಿಳಿಸಿದ್ದಾರೆ.
ದೇಶದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ RT-PCR ಪರೀಕ್ಷೆಗಳನ್ನು ಪ್ರಾರಂಭಿಸಲಾಗಿದೆ ಎಂದು ಮಾಂಡವೀಯ ಮಾಹಿತಿ ನೀಡಿದ್ದಾರೆ.
ದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಉನ್ನತ ಮಟ್ಟದ ಸಭೆಗೆ ಮುನ್ನ ಮಾಂಡವಿಯಾ ಈ ಮಾತುಗಳನ್ನು ಹೇಳಿದ್ದಾರೆ. ಇಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ಸಭೆ ನಡೆಸಲಿದ್ದಾರೆ.
ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್‌ನ ಹೊಸ ರೂಪಾಂತರದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೂ ಕಳವಳ ವ್ಯಕ್ತಪಡಿಸಿದೆ. ಹೊಸ ರೂಪಾಂತರ ತಳಿ ಒಮಿಕ್ರಾನ್ ಸಬ್‌ವೇರಿಯಂಟ್‌ನಿಂದ (BF.7) ಚೀನಾದಲ್ಲಿ ಸಾವುಗಳು ಹೆಚ್ಚಾಗುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ. ಒಮಿಕ್ರಾನ್ ಸಬ್‌ವೇರಿಯಂಟ್‌ನ ನಾಲ್ಕು ಪ್ರಕರಣಗಳು ಭಾರತದಲ್ಲೂ ಕಾಣಿಸಿಕೊಂಡಿವೆ. ಇದನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಜ್ಞರ ಜೊತೆ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ.












Click it and Unblock the Notifications