Israel-Iran war: ಪ್ರಧಾನಿ ಮೋದಿ ತುರ್ತು ಸಭೆ, ಭಾರತದ ಲೆಕ್ಕಾಚಾರ ತಲೆಕೆಳಗೆ
ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪಶ್ಚಿಮ ಏಷ್ಯಾದ ಪ್ರಮುಖ ರಾಷ್ಟ್ರಗಳ ನಡುವೆ ಭದ್ರತಾ ಪರಿಸ್ಥಿತಿಯು ಉಲ್ಬಣವಾಗುತ್ತಿದೆ (ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ) ಇದು ಭಾರತದಲ್ಲೂ ಆತಂಕ ಮೂಡಿಸಿದೆ. ಈ ರಾಷ್ಟ್ರಗಳ ನಡುವೆ ಯುದ್ಧ ಪರಿಸ್ಥಿತಿ ಸೃಷ್ಟಿಯಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ತುರ್ತು ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಸಿರುವುದು ವರದಿಯಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಹೆಚ್ಚಾಗುತ್ತಿರುವುದರಿಂದ ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ ಎನ್ನುವುದು ಪ್ರಧಾನವಾಗಿ ಚರ್ಚೆ ಮಾಡಲಾಗಿದೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷವು ವಿಶ್ವದಲ್ಲಿ ಹೊಸ ಆತಂಕವನ್ನೇ ಸೃಷ್ಟಿ ಮಾಡಿವೆ. ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದೀಗ ಇದಕ್ಕೆ ಪ್ರತೀಕಾರವಾಗಿ ದಾಳಿ ಮಾಡುವುದಕ್ಕೆ ಇಸ್ರೇಲ್ ಭಯಂಕರ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಸ್ರೇಲ್ ಹಾಗೂ ಇರಾನ್ ನಡುವೆ ಈ ಬಾರಿ ದೊಡ್ಡ ಮಟ್ಟದಲ್ಲಿ ಸಂಘರ್ಷ ನಡೆಯುತ್ತಿದೆ. ಈ ಯುದ್ಧದ ಕಾರ್ಮೋಡ ಇದೀಗ ಭಾರತದ ಕಡೆಯೂ ತಿರುಗಿದೆ. ಈಚೆಗಷ್ಟೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿತ್ತು. ಇದರಿಂದ ಭಾರತದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಏಕಾಏಕಿ ಇಸ್ರೇಲ್ ಹಾಗೂ ಇರಾನ್ ನಡುವೆ ಸೃಷ್ಟಿಯಾಗಿರುವ ಸಂಘರ್ಷವು ಭಾರತದ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಅಲ್ಲದೇ ಪಶ್ಚಿಮ ಏಷ್ಯಾದಲ್ಲಿ ಸೃಷ್ಟಿಯಾಗಿರುವ ಸಂಘರ್ಷದಿಂದ ಪೆಟ್ರೋಲಿಯಂ ಉತ್ಪನ್ನ, ವ್ಯಾಪಾರ ಮತ್ತು ಪೂರೈಕೆಯ ಮೇಲೆ ಭಾರೀ ಪ್ರಭಾವ ಬೀರುವ ಆತಂಕ ಎದುರಾಗಿದೆ ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ಸಮಿತಿಯ ಸಭೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ಇದ್ದರು. ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಇದು ಭಾರತದ ಮೇಲೆ ಹೇಗೆ ಪರಿಣಾಮ ಬೀರಲಿದೆ ಎನ್ನುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಪಶ್ಚಿಮ ಏಷ್ಯಾದಲ್ಲಿನ ಈ ಬೆಳವಣಿಗೆಯು ವಿವಿಧ ವಿಷಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬಿಕ್ಕಟ್ಟಿನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಖ್ಯವಾಗಿ ವ್ಯಾಪಾರ, ಸರಕು ಆಮದು, ರಫ್ತು ಹಾಗೂ ಪುನರ್‌ರಫ್ತು ಪೂರೈಕೆಯ ಮೇಲೆ ಪರಿಣಾಮ ಬೀರಲಿದೆ. ಇದೆಲ್ಲದ್ದಕ್ಕಿಂತ ಮುಖ್ಯವಾಗಿ ಕಚ್ಚಾ ತೈಲ, ಪೆಟ್ರೋಲಿಯಂ ಹಾಗೂ ಅದರ ಉತ್ಪನ್ನಗಳ ಪೂರೈಕೆಯಲ್ಲಿ ಗಂಭೀರ ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಅಲ್ಲದೇ ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಹೆಚ್ಚಳವಾಗುವ ಸಾಧ್ಯತೆ ಇದೆ.












Click it and Unblock the Notifications