Breaking: ಜಮ್ಮು ಮತ್ತು ಕಾಶ್ಮೀರ ಚುನಾವಣೆ, 44 ಬಿಜೆಪಿ ಅಭ್ಯರ್ಥಿಗಳು ಘೋಷಣೆ
ಶ್ರೀನಗರ, ಆಗಸ್ಟ್ 26: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು 90 ಸದಸ್ಯ ಬಲದ ವಿಧಾನಸಭೆಗೆ ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಬಿಜೆಪಿ ಸೋಮವಾರ 44 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 4ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಪಕ್ಷ ಚುನಾವಣೆ ಎದುರಿಸುತ್ತಿದೆ. 90 ಕ್ಷೇತ್ರಗಳ ಪೈಕಿ ಉಳಿದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷೇತರ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ನಿರೀಕ್ಷೆ ಇದೆ.

2014ರ ವಿಧಾನಸಭೆ ಚುನಾವಣೆ ಬಳಿಕ ಕಣಿವೆ ರಾಜ್ಯದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದ್ದವು. ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಈ ಐತಿಹಾಸಿಕ ತೀರ್ಮಾನದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2014ರಲ್ಲಿ ಬಿಜೆಪಿ 25 ಸೀಟುಗಳಲ್ಲಿ ಜಯಗಳಿಸಿತ್ತು. ಪಿಡಿಪಿ 28 ಸೀಟಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 15, ಕಾಂಗ್ರೆಸ್ 12 ಸೀಟುಗಳಲ್ಲಿ ಜಯಗಳಿಸಿದ್ದವು.
ಈ ಬಾರಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇದೆ. ಬಿಜೆಪಿ, ಪಿಡಿಪಿ ಮತ್ತು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಎದುರಾಳಿಗಳು. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತು ಸಲ್ಮಾನ್ ಖುರ್ಷಿದ್ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಲು ಶ್ರೀನಗರಕ್ಕೆ ಆಗಮಿಸಿದ್ದಾರೆ.
ಕಳೆದ ವಾರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಸಭೆಯ ಬಳಿಕ ಈ ಬಾರಿಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ನಡುವೆ ಮೈತ್ರಿ ಘೋಷಣೆ ಮಾಡಲಾಗಿತ್ತು. 'ಈ ಮೈತ್ರಿಕೂಟ ಕಾಗದದ ಮನೆಯಂತೆ ಮುರಿದು ಬೀಳಲಿದೆ. ಪಕ್ಷ ಹೀನಾಯ ಸೋಲು ಕಾಣಲಿದೆ" ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚೌಗ್ ಟೀಕಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ 90 ಸೀಟುಗಳಿಗೆ 3 ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 24 ಕ್ಷೇತ್ರಗಳಿಗೆ ಸೆಪ್ಟೆಂಬರ್ 24, 26 ಕ್ಷೇತ್ರಗಳಿಗೆ ಸೆಪ್ಟೆಂಬರ್ 25 ಮತ್ತು 40 ಸೀಟುಗಳಿಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ ಜೊತೆಗೆ ಹರ್ಯಾಣ ರಾಜ್ಯದ ವಿಧಾನಸಭೆ ಚುನಾವಣೆಯೂ ನಡೆಯಲಿದ್ದು, ಎಲ್ಲಾ ಚುನಾವಣೆಗಳ ಫಲಿತಾಂಶ ಅಕ್ಟೋಬರ್ 4ರಂದು ಪ್ರಕಟವಾಗಲಿದೆ.












Click it and Unblock the Notifications