Jharkhand Election 2024: ಜಾರ್ಖಂಡ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧ
ಹರಿಯಾಣ ಹಾಗೂ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶದ ನಡುವೆ ಜಾರ್ಖಂಡ್ ವಿಧಾನಸಭಾ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಉಳಿದಿದೆ. ಹರಿಯಾಣ ಹಾಗೂ ಜಮ್ಮು ಕಾಶ್ಮೀರ ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಥಾನ ಕಳೆದುಕೊಳ್ಳುವ ಲಕ್ಷಣವಿದ್ದು, ಮುಂಬರುವ ಚುನಾವಣೆಗಳು ಸವಾಲಾಗಿ ಪರಿಣಮಿಸಿವೆ.
ಹೌದು.. ವರ್ಷಾಂತ್ಯದಲ್ಲಿ ನಡೆಯಲಿರುವ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯನ್ನಿಡುತ್ತಿದೆ. ಚುನಾವಣೆಗೂ ಮುನ್ನ, ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಹುತೇಕ ಅಂತಿಮಗೊಳಿಸಿದೆ. ಪ್ರತಿ ವಿಧಾನಸಭಾ ಸ್ಥಾನಕ್ಕೆ ಮೂರು ಹೆಸರಿನ ಫಲಕವನ್ನು ಬಿಜೆಪಿ ಸಿದ್ಧಪಡಿಸಿದೆ. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಈ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಈ ಹೆಸರುಗಳಲ್ಲಿ ಇತ್ತೀಚೆಗೆ ಬಿಜೆಪಿ ಸೇರಿದ ನಾಯಕರ ಹೆಸರುಗಳೂ ಇವೆ.

ಬಿಜೆಪಿ ತನ್ನ ಮಿತ್ರಪಕ್ಷಗಳಾದ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಮತ್ತು ಸುದೇಶ್ ಮಹತೋ ಅವರ ಪಕ್ಷ ಎಜೆಎಸ್‌ಯು ಜೊತೆ ಚುನಾವಣೆ ಎದುರಿಸಬಹುದು. ರಾಜ್ಯದ 81 ವಿಧಾನಸಭಾ ಸ್ಥಾನಗಳ ಪೈಕಿ ಜೆಡಿಯು ಎರಡು ಮತ್ತು ಎಲ್‌ಜೆಪಿ ಒಂದು ಸ್ಥಾನ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಸ್ಥಳೀಯ ಮಿತ್ರ ಪಕ್ಷವಾಗಿರುವ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟಕ್ಕೆ ಒಂಬತ್ತು ಸ್ಥಾನಗಳನ್ನು ನೀಡುವ ಸಾಧ್ಯತೆಯಿದೆ.
ಪ್ರತಿ ವಿಧಾನಸಭಾ ಸ್ಥಾನಕ್ಕೆ ಮೂರು ಹೆಸರಿನ ಫಲಕ ಸಿದ್ಧ
ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಪಕ್ಷ ಮೂರು ಹಂತದ ಕಾರ್ಯಕರ್ತರಿಂದ (ಮಂಡಲ ಮಟ್ಟ, ಬೂತ್ ಮಟ್ಟ ಮತ್ತು ಸಂಸದರು) ಸಲಹೆಗಳನ್ನು ಕೇಳಿದೆ. ಆಂತರಿಕ ಸಮೀಕ್ಷೆಯ ಫಲಿತಾಂಶಗಳನ್ನು ಗಮನದಲ್ಲಿಟ್ಟುಕೊಂಡು ಮೂವರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಆದರೆ, ಸ್ಥಾನಗಳ ಅಂತಿಮ ನಿರ್ಧಾರವನ್ನು ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ.
ಇನ್ನೂ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಅದರ ಮಿತ್ರ ಪಕ್ಷವಾದ ಕಾಂಗ್ರೆಸ್‌ನ ಅಭ್ಯರ್ಥಿಗಳು ಖುಂತಿ, ಸಿಂಗ್‌ಭೂಮ್, ಲೋಹರ್ದಗಾ, ರಾಜಮಹಲ್ ಮತ್ತು ದುಮ್ಕಾದಿಂದ ಗೆದ್ದಿದ್ದಾರೆ.
ಅಂತಿಮ ಸ್ಥಾನಗಳ ಕುರಿತು ಚರ್ಚಿಸಲು ದೆಹಲಿಯಲ್ಲಿ ಸಭೆ ನಡೆಸಲಿದೆ. ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ, ರಾಜ್ಯ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸಹ ಚುನಾವಣಾ ಉಸ್ತುವಾರಿ ಹಿಮಂತ ಬಿಸ್ವ ಶರ್ಮಾ, ಪ್ರಾದೇಶಿಕ ಸಂಸ್ಥೆ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ನಾಥ್ ತ್ರಿಪಾಠಿ, ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕಳೆದ 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಜೆಎಂಎಂ 30 ಸ್ಥಾನಗಳನ್ನು ಗೆದ್ದಿತ್ತು ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ 16 ಸ್ಥಾನಗಳನ್ನು ಗೆದ್ದಿತ್ತು. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಫಲಿತಾಂಶದ ನಂತರ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ಚುನಾವಣಾ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ.
ಇಂದು (ಅಕ್ಟೋಬರ್ 8) ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದೆ. ಸಂಜೆ ನಂತರ ಫಲಿತಾಂಶ ನಿಖರವಾಗಿ ತಿಳಿಯಲಿದೆ.












Click it and Unblock the Notifications