Jharkhand: ಪ್ರಮಾಣವಚನಕ್ಕೆ ಖರ್ಗೆ, ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ಹೇಮಂತ್ ಸೊರೇನ್
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು ಎರಡನೇ ಬಾರಿ ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ಹೇಮಂತ್ ಸೊರೇನ್ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು ಅದ್ದೂರಿಯಾಗಿ ಪ್ರಮಾಣ ವಚನ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆಯುತ್ತಿದೆ. ಮಂಗಳವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿದ್ದಾರೆ.
ರಾಹುಲ್, ಖರ್ಗೆಯನ್ನು ಆಹ್ವಾನಿಸಿದ ಬಳಿಕ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿಯನ್ನು ಭೇಟಿ ಮಾಡಿದ್ದು ಪ್ರಮಾಣ ವಚನಕ್ಕೆ ಆಹ್ವಾನ ನೀಡಿದರು. ನವೆಂಬರ್ 28 ರಂದು ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ದೆಹಲಿಯಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ನವೆಂಬರ್ 28ರಂದು ನಮ್ಮ ಸರ್ಕಾರದ ಪ್ರಮಾಣ ವಚನ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಿದ್ದೇನೆ." ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರೊಂದಿಗಿನ ಸಭೆಯ ಚಿತ್ರಗಳನ್ನೂ ಅವರು ಹಂಚಿಕೊಂಡಿದ್ದಾರೆ. ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಸೊರೆನ್ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದೇನೆ ಮತ್ತು ನವೆಂಬರ್ 28 ರಂದು ನಮ್ಮ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅವರನ್ನು ಆಹ್ವಾನಿಸಿದ್ದೇನೆ ಎಂದು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅಭಿನಂದನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಮಂತ್ ಸೊರೇನ್ ಮತ್ತು ಕಲ್ಪನಾ ಸೊರೇನ್ ಅವರ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ವಿಜಯಕ್ಕಾಗಿ ಹೇಮಂತ್ ಸೋರೆನ್ ಮತ್ತು ಕಲ್ಪನಾ ಸೊರೆನ್ ಮತ್ತು ನಮ್ಮ ಮೈತ್ರಿಕೂಟದ ಎಲ್ಲಾ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಜಾರ್ಖಂಡ್‌ನಲ್ಲಿ ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಎಲ್ಲರ ಲೆಕ್ಕಾಚಾರಗಳನ್ನು ಮತದಾರ ತಲೆಕೆಳಗಾಗಿಸಿದ್ದು ಮತ್ತೆ ಸೊರೇನ್ ಸರ್ಕಾರಕ್ಕೆ ಅವಕಾಶ ನೀಡಿದ್ದಾನೆ.
ಜಾರ್ಖಂಡ್ 81 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 56 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಎನ್‌ಡಿಎ ಕೇವಲ 24 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.












Click it and Unblock the Notifications