Jharkhand: ಸರ್ಕಾರ ರಚಿಸುವ ವಿಶ್ವಾಸದಲ್ಲಿ ಬಿಜೆಪಿ, ಜೆಎಂಎಂ; ಸೋಲು ಗೆಲುವಿನ ಲೆಕ್ಕಾಚಾರ ಜೋರು
ಜಾರ್ಖಂಡ್ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ. 81 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿದೆ. ನವೆಂಬರ್ 13ರಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ, ನವೆಂಬರ್ 20ರಂದು ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಅಭ್ಯರ್ಥಿಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಆರಂಭಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಜಾರ್ಖಂಡ್ ರಾಜ್ಯದಲ್ಲಿ ಅಧಿಕಾರ ಪಡೆಯುವ ವಿಶ್ವಾಸದಲ್ಲಿದೆ. ಮಿತ್ರಪಕ್ಷಗಳ ಜೊತೆ ಸೀಟು ಹಂಚಿಕೊಂಡಿದ್ದ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ (ಎಜೆಎಸ್‌ಯು) 10 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದು, ಜೆಡಿಯು 2 ಕ್ಷೇತ್ರಗಳಲ್ಲಿ ಮತ್ತು ಜನಶಕ್ತಿ ಪಕ್ಷ (ರಾಮ್ ವಿಲಾಸ್) 1 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ.

ಇಂಡಿಯಾ ಒಕ್ಕೂಟದಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ 41 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆರ್ ಜೆಡಿ 6 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) 4 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಮತಎಣಿಕೆ ಯಾವಾಗ?
ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ಮಾಡಲಾಗುತ್ತದೆ. 8.30 ರಿಂದ ಇವಿಎಂ ಎಣಿಕೆ ಆರಂಭವಾಗಲಿದೆ. ಬೆಳಗ್ಗೆ 9.30ರ ವೇಳೆಗೆ ಮೊದಲ ಸುತ್ತಿನ ಫಲಿತಾಂಶ ಹೊರಬರಲಿದೆ ಎಂದು ನಿರೀಕ್ಷೆ ಮಾಡಲಾಗಿದ್ದು, ಬಳಿಕ 20 ರಿಂದ 30 ನಿಮಿಷಕ್ಕೊಮ್ಮೆ ಫಲಿತಾಂಶದ ಅಪ್‌ಡೇಟ್ ಮಾಹಿತಿ ಕೊಡಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕೆ ರವಿ ಕುಮಾರ್ ಹೇಳಿದ್ದಾರೆ.
ವಿವಿಧ ಚುನಾವಣಾ ಪೂರ್ವ ಸಮೀಕ್ಷೆಗಳು ಎನ್‌ಡಿಎ ಪರವಾಗಿ ಬಂದಿದ್ದರೆ, ಮತ್ತಷ್ಟು ಸಮೀಕ್ಷೆಗಳು ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಸಿ ವೋಟರ್ ಸಮೀಕ್ಷೆ ಅತಂತ್ರ ಫಲಿತಾಂಶ ಬರುವ ಮುನ್ಸೂಚನೆ ಕೊಟ್ಟಿದೆ. ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ರಾಜ್ಯ ರಾಜಕೀಯ ಮತ್ತಷ್ಟು ರಂಗೇರಲಿದೆ.
ಬಿಜೆಪಿ ಪರವಾಗಿ ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಪ್ರಚಾರ ಮಾಡಿದ್ದಾರೆ. ಇಂಡಿಯಾ ಒಕ್ಕೂಟದಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಪ್ರಚಾರ ಮಾಡಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜ್ಯಾದ್ಯಂತ ಭರ್ಜರಿ ಪ್ರಚಾರ ಮಾಡಿದ್ದಾರೆ.












Click it and Unblock the Notifications