ಕಾಡುಗೊಲ್ಲ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ: ಅಮಿತ್ ಶಾ ಎದುರು ಸೋಮಣ್ಣ ಮನವಿ
ನವದೆಹಲಿ: ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ವೇಳೆ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಕುರಿತು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಸೋಮಣ್ಣ ಅವರು ಅಮಿತ್ ಶಾ ಅವರನ್ನು ಕೋರಿದರು.ಈ ಸಂಬಂಧ ಇದೇ ವರ್ಷದ ಮಾರ್ಚ್ 25ರಂದು ಕೂಡ ವಿ. ಸೋಮಣ್ಣ ಅವರು ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ಪರಿಶೀಲನೆಗಾಗಿ ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ (ORGI) ಗೆ ರವಾನಿಸಿತ್ತು.

ನಂತರ ORGI ಕಚೇರಿಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ಮುಂದಿನ ಕ್ರಮಕ್ಕಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಕಳುಹಿಸಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸೋಮಣ್ಣ ಅವರು, ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸಿದರೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಈ ಸಮುದಾಯಕ್ಕೆ ಸಂವಿಧಾನದ ಆಶಯದಂತೆ ನ್ಯಾಯ ದೊರೆಯಲಿದ್ದು, ಅವರ ಅಭಿವೃದ್ಧಿಗೆ ಹೊಸ ಅವಕಾಶಗಳು ಸಿಗಲಿವೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಮಿತ್ ಶಾ ಅವರ ಗಮನಕ್ಕೆ ತಂದರು. ಒಟ್ನಾಲಿ, ಕಾಡುಗೊಲ್ಲ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ ಎಸ್‌ಟಿ ಸ್ಥಾನಮಾನ ಕುರಿತಂತೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಕ್ರಿಯೆ ಮುಂದುವರಿದಿದ್ದು, ಮುಂದಿನ ನಿರ್ಧಾರದತ್ತ ಸಮುದಾಯದ ಚಿತ್ತ ನೆಟ್ಟಿದೆ.


Click it and Unblock the Notifications
