ಲೋಕಸಭಾ ಚುನಾವಣೆ: ಬಿಜೆಪಿ ಟಿಕೆಟ್ ಪಡೆದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಕಂಗನಾ ರಣಾವತ್
ಅಚ್ಚರಿಯ ಬೆಳವಣಿಗೆಯಲ್ಲಿ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಪಡೆದಿರುವ ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಬಿಜೆಪಿ ಸೇರಿದ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ-ರಾಜಕಾರಣಿ ಕಂಗನಾ ರಣಾವತ್ ತಮ್ಮ ಅಭಿಮಾನಿಗಳಿಗೆ ಹೋಳಿ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೆ ನನಗೆ ಸವಾಲುಗಳು ಹೊಸದೇನಲ್ಲ ಎಂದು ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ನಂತರ ಕಂಗನಾ ತನ್ನ ಕುಟುಂಬದ ಪ್ರತಿಕ್ರಿಯೆ ಹೇಗಿತ್ತು ಎಂದು ಹೇಳಿದ್ದಾರೆ. "ನಾನು ಅಭಿಮಾನಿಗಳಿಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ. ನನ್ನ ಜನ್ಮಸ್ಥಳ ನನ್ನನ್ನು ಮರಳಿ ಕರೆದಿರುವುದು ನನ್ನ ಅದೃಷ್ಟ. ಮಂಡಿಯ ಜನರು ನನ್ನನ್ನು ಆಯ್ಕೆ ಮಾಡಿದರೆ ನನ್ನ ಕೈಲಾದಷ್ಟು ಸೇವೆ ಮಾಡುತ್ತೇನೆ." ಎಂದು ಹೇಳಿದ್ದಾರೆ.
ಟಿಕೆಟ್ ಕೊಟ್ಟಿದ್ದಕ್ಕೆ ಧನ್ಯವಾದ
ನಾನು ಅತ್ಯಂತ ಭಾವುಕಳಾಗಿದ್ದೇನೆ. ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ಕ್ಷಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರಿಗೆ ನಾನು ಆಭಾರಿಯಾಗಿದ್ದೇನೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಯಾವಾಗಲೂ ನನಗೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಮಾಜಿ ಸಿಎಂ ಜೈರಾಮ್ ಠಾಕೂರ್ ಅವರು ಯಾವಾಗಲೂ ನನಗೆ ಮಾರ್ಗದರ್ಶನ ನೀಡಿದ್ದಾರೆ. ಈ ಜವಾಬ್ದಾರಿಗಾಗಿ ನಾನು ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸವಾಲುಗಳು ನನಗೆ ಹೊಸದೇನಲ್ಲ. ನಾನು ಚಿಕ್ಕ ವಯಸ್ಸಿನಲ್ಲಿಯೇ ವೃತ್ತಿಗಾಗಿ ಮನೆ ತೊರೆದಿದ್ದೇನೆ ಮತ್ತು ಅನೇಕ ಅಡೆತಡೆಗಳನ್ನು ಎದುರಿಸಿದ್ದೇನೆ. ಅದಕ್ಕಾಗಿಯೇ ದೇವರು ನನಗೆ ನನ್ನ ಜನರ ಸೇವೆ ಮಾಡುವ ಶಕ್ತಿಯನ್ನು ಕೊಟ್ಟಿದ್ದಾನೆ ಎಂದು ಹೇಳಿದರು.
ಮುಂದೆ ಕಂಗನಾ ಅವರ ನಿರ್ದೇಶನದ ಎಮರ್ಜೆನ್ಸಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.












Click it and Unblock the Notifications