"ನಮ್ಮ ರಕ್ತದಲ್ಲಿ ಕನ್ನಡವಿದೆ" ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಬಗ್ಗೆ ರಾಜ್ಯ ಸರ್ಕಾರ ಹೇಳಿದ್ದೇನು ?
ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುತ್ತಿದೆ. ಕನ್ನಡ ಶಾಲೆಗಳ ವಿಲೀನ ಮಾಡುತ್ತಿದೆ ಎನ್ನುವ ವರದಿಗಳ ನಡುವೆಯೇ ಈ ವಿಚಾರದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ.
ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 - 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರ ನೀಡಿದ್ದಾರೆ.
ನಾವು ಬಜೆಟ್‌ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ. ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.
ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ದಗೊಳಿಸುವ ಮೂಲಕ ಕೆಪಿಎಸ್ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು.
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆಪಿಎಸ್ ಶಾಲೆಗಳ ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಕನ್ನಡಿಗರಿಂದ ವಿರೋಧ ವ್ಯಕ್ತವಾಗಿತ್ತು: ಇನ್ನು ಕರ್ನಾಟಕದಲ್ಲಿ ಕನ್ನಡ ಮಾಧ್ಯಮಗಳ ಶಾಲೆಗಳನ್ನು ಮುಚ್ಚುವುದು ಅಥವಾ ಕನ್ನಡ ಮಾಧ್ಯಮ ಶಾಲೆಗಳ ವಿಲೀನ ಮಾಡುವ ಪ್ರಸ್ತಾವನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಮಹತ್ವದ ಸ್ಪಷ್ಟನೆಯನ್ನು ನೀಡಿದೆ.












Click it and Unblock the Notifications