ಪರೀಕ್ಷಾ ವ್ಯವಸ್ಥೆ ಸುಧಾರಣೆ ಹೊಣೆ ಕನ್ನಡಿಗನಿಗೆ, ನಂದನ್ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್
Neet Examination: ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಈ ಜವಾಬ್ದಾರಿಯನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಹಾಗೂ ಸಂಸದ ಪ್ರಲ್ಹಾದ್ ಜೋಶಿ ಅವರ ಹೇಗಲಿಗೆ ಹೊರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕನ್ನಡಿಗನ ನೇತೃತ್ವದಲ್ಲಿ ಉನ್ನತ ಮಟ್ಟದ ಹೈ-ಪವರ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜುಲೈ 26) ಘೋಷಣೆ ಮಾಡಿದ್ದಾರೆ.
ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಮಹತ್ವದ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಪ್ರಸಿದ್ಧ ತಂತ್ರಜ್ಞಾನ ತಜ್ಞ, ಕನ್ನಡಿಗ ನಂದನ್ ನೀಲೆಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ 'ಹೈ-ಪವರ್ ಟಾಸ್ಕ್ ಫೋರ್ಸ್' ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

'ಹೊಸ ಕಾನೂನು ಜಾರಿಗೆ ತರಲು ಸಿದ್ಧತೆ'
ಸೋಷಿಯಲ್ ಮೀಡಿಯಾ ಈ ಈ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, 'ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರ ಸತತವಾಗಿ ಶ್ರಮಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿ ಪರೀಕ್ಷಾ ಅಕ್ರಮ ಎಸಗಿದವರು ಈಗಾಗಲೇ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂತಹ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಸಂಸತ್ತಿನಲ್ಲಿ ಅತ್ಯಂತ ಕಠಿಣ ನಿಯಮಗಳನ್ನು ಒಳಗೊಂಡ ಹೊಸ ಕಾನೂನು ಜಾರಿಗೆ ತರಲು ತೀರ್ಮಾನಿಸಲಾಗುವುದು,' ಎಂದು ತಿಳಿಸಿದ್ದಾರೆ.
ಕನ್ನಡಿಗನ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ
ಕೇವಲ ಶಿಕ್ಷೆಯಿಂದಷ್ಟೇ ಅಲ್ಲದೆ ಭವಿಷ್ಯದ ದೃಷ್ಟಿಯಿಂದ ಪರೀಕ್ಷಾ ಪದ್ಧತಿಯನ್ನು ಅತ್ಯಂತ ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಪರೀಕ್ಷಾ ಪ್ರಕ್ರಿಯೆಯಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಎಲ್ಲಾ ಬದಲಾವಣೆಗಳ ರೂಪುರೇಷೆ ಸಿದ್ಧಪಡಿಸಲು ನಂದನ್ ನೀಲೆಕಣಿ ಅವರ ನಾಯಕತ್ವದಲ್ಲಿ ರಚಿಸಲಾಗಿರುವ ಈ ಹೈ-ಪವರ್ ಟಾಸ್ಕ್ ಫೋರ್ಸ್ ಕಾರ್ಯನಿರ್ವಹಿಸಲಿದೆ,' ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಂಪೂರ್ಣ ತಡೆಗಟ್ಟಲು ನಂದನ್ ನಿಲೇಕಣಿ ಅವರ ಅನುಭವವನ್ನು ಬಳಸಿಕೊಳ್ಳಲಾಗುತ್ತಿದೆ. ಈ ಕಾರ್ಯಪಡೆಯು ಪರೀಕ್ಷಾ ಪದ್ಧತಿಯಲ್ಲಿ ಮಾಡಬೇಕಾದ ತಾಂತ್ರಿಕ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಕುರಿತು ವರದಿ ನೀಡಲಿದೆ. ಅದರ ಆಧಾರದ ಮೇಲೆ ಮುಂಬರುವ ಪರೀಕ್ಷೆಗಳನ್ನು ಯಾವುದೇ ಲೋಪವಿಲ್ಲದೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದರ ಪ್ರಮುಖ ಉದ್ದೇಶ ಏನು?
ಈ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ದೇಶದ ಪರೀಕ್ಷಾ ವ್ಯವಸ್ಥೆಯನ್ನು ಕೂಲಂಕಷವಾಗಿ ಅಧ್ಯಯನ ಮಾಡಲಿದೆ. ಪರೀಕ್ಷಾ ಸುಧಾರಣೆಗಳ ಕುರಿತು ಶೀಘ್ರದಲ್ಲೇ ವರದಿಯನ್ನು ಸಲ್ಲಿಸಲಿದೆ. ಈ ಸಮಿತಿ ನೀಡುವ ವರದಿ ಹಾಗೂ ಶಿಫಾರಸುಗಳ ಆಧಾರದ ಮೇಲೆಯೇ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಮತ್ತು ಪ್ರಮುಖ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ತಕ್ಷಣದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಪರೀಕ್ಷೆಗಳ ಹಂತ-ಹಂತದಲ್ಲೂ ಭದ್ರತೆ ಹೆಚ್ಚಿಸುವುದು, ತಂತ್ರಜ್ಞಾನ ಬಳಸುವುದು ಮತ್ತು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸುವುದು ಈ ಉನ್ನತ ಸಮಿತಿಯ ಮುಖ್ಯ ಉದ್ದೇಶವಾಗಿದೆ ಎನ್ನಲಾಗುತ್ತಿದೆ.
ಟಾಸ್ಕ್ ಫೋರ್ಸ್ ತಂಡದಲ್ಲಿ ಯಾರೆಲ್ಲಾ ಇದ್ದಾರೆ?
* ನಂದನ್ ನೀಲೆಕಣಿ - ಇನ್ಫೋಸಿಸ್ ಸಹ ಸಂಸ್ಥಾಪಕ
* ಎಸ್ ಸೋಮನಾಥ್ - ಇಸ್ರೋ ಮಾಜಿ ಅಧ್ಯಕ್ಷ
* ವಿ ಕಾಮಕೋಟಿ, - ಚೆನ್ನೈ ಐಐಟಿ ನಿರ್ದೇಶಕ
* ತಪನ್ ದೇಕಾ - ಮಾಜಿ ಐಬಿ ನಿರ್ದೇಶಕ
* ಅನಿತಾ ಕರ್ವಾಲ್ - ಮಾಜಿ ಶಿಕ್ಷಣ ಕಾರ್ಯದರ್ಶಿ
* ಅಮೃತ್ ಲಾಲ್ ಮೀನಾ - ಮೂಲಸೌಕರ್ಯ ಹಾಗೂ ಆಡಳಿತ ತಜ್ಞರು


Click it and Unblock the Notifications
