CM Delhi Visit: ಮುಡಾ ಪ್ರಾಸಿಕ್ಯೂಷನ್: ಖರ್ಗೆ, ರಾಹುಲ್ ಭೇಟಿಗೆ ದೆಹಲಿ ತೆರಳಿದ ಸಿಎಂ, ಡಿಸಿಎಂ
ಬೆಂಗಳೂರು ಆಗಸ್ಟ್ 23: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ತೆರಳಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಹೈಕಮಾಂಡ್ ಜೊತೆ ಚರ್ಚೆ ಬಳಿಕ ಸಿಎಂ ಮುಂದಿನ ನಡೆ ಏನು ಎನ್ನುವುದು ಗೊತ್ತಾಗಲಿದೆ. ರಾಜ್ಯಪಾಲರ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ಆರೋಪ ಹಾಗೂ ಪ್ರತ್ಯಾರೋಪಗಳ ನಡುವೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಜೊತೆಗೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯಪಾಲರಿಗೆ ಠಕ್ಕರ್ ಕೊಡಲು ಆಡಳಿತ ಪಕ್ಷ ಕಾಂಗ್ರೆಸ್ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಮೇಲಿರುವ ಆರೋಪಗಳ ವಿಚಾರಣೆಗೆ ಒತ್ತಾಯಿಸಿದೆ. ಅಲ್ಲದೆ ಹೆಚ್‌ಡಿ ಕುಮಾರಸ್ವಾಮಿ ಮೇಲೆ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಒತ್ತಾಯಿಸಿದೆ. ಹೀಗಾಗಿ ರಾಜ್ಯ ರಾಜಕೀಯ ವಲಯದಲ್ಲಿ ಮುಡಾ ಹಗರಣ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಮೇಲಿರುವ ಆರೋಪಗಳು ತಾರಕಕ್ಕೇರಿವೆ.
ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸಿಎಂ ಹೈಕಮಾಂಡ್ ಮುಂದೆ ಚರ್ಚೆ ಮಾಡಲಿದ್ದಾರೆ. ಅಲ್ಲದೆ ಇದೇ ವಿಚಾರವಾಗಿ ಕಳೆದ ದಿನ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚೆ ಕೂಡ ಮಾಡಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ವಿಷಯಗಳನ್ನು ಸಿಎಂ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಮುಂದಿಡಲಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಸಲು ಬೇಕಾದ ಬೆಂಬಲ ನೀಡುವಂತೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಮನವಿ ಮಾಡಲಿದ್ದಾರೆ. ಆಗಸ್ಟ್ 29ರಂದು ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದ್ದು ಈ ಬಗ್ಗೆ ಹೈಕಮಾಂಡ್ ಮುಂದಿನ ಕ್ರಿಯಾ ಯೋಜನೆ ಬಗ್ಗೆ ಸಿಎಂ ಚರ್ಚಿಸಲಿದ್ದಾರೆ. ಅಂದು ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಕೀಲ ಅಭಿಷೇಕ್ ಮನು ಸಾಂಘ್ವಿ ವಾದ ಮಂಡಿಸುತ್ತಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದರಿಂದ ತನಿಖೆಗೆ ಸಹಕರಿಸಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯ ಹೇರಿವೆ. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷ ಕಾಂಗ್ರೆಸ್, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಕೆಲ ಹಗರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲಾತಿಗಳಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಯಾಕೆ ಅನುಮತಿ ನೀಡಿಲ್ಲ ಎಂದು ಧ್ವನಿ ಎತ್ತಿವೆ. ರಾಜ್ಯಪಾಲರ ಆಡಳಿತವನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಹೀಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಆರೋಪ ಪ್ರತ್ಯಾರೋಪಗಳು ಚುರುಕುಕೊಂಡಿವೆ.
ಇದರಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಸ್ಟ್ರಾಂಗ್ ಆಗಿ ನಿಲ್ಲಬೇಕು. ಒಂದು ವೇಳೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಿಸಿದರೆ, ಹೈಕಮಾಂಡ ಸಿದ್ದರಾಮಯ್ಯ ಪರ ನಿಲ್ಲಬೇಕು ಎಂದು ಸಿಎಂ ವಾದ ಮಂಡಿಸಲಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಬಾರದು ಎಂದು ಹೈಕಮಾಂಡ ಮುಂದೆ ವಾದಿಸಲಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications