DK Shivakumar To Meet Narendra Modi: ಪ್ರಧಾನಿ ಮೋದಿ ಭೇಟಿ ಮಾಡಿದ ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಜೂನ್ 29: ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದರು.

ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು" ಎಂದು ಹೇಳಿದರು.
ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಲಾಯಿತೇ ಎಂದು ಕೇಳಿದಾಗ "ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ. ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದರು.
ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.












Click it and Unblock the Notifications