Mahakumbh Stampede: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ನೆರವಿಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಹಲವರು ಸಾವನ್ನಪ್ಪಿರುವ ಶಂಕೆಯಿದ್ದು, ಇನ್ನೂ ಖಚಿತವಾಗಿಲ್ಲ. ಕಾಲ್ತುಳಿತದಲ್ಲಿ ಕರ್ನಾಟಕದ ಜನರು ಕೂಡ ಹೆಚ್ಚಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕರ್ನಾಟಕ ಸರ್ಕಾರವು ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದೆ.
ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ. ಮಹಾಕುಂಭ ಮೇಳದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಜನರಿಗೆ ಏನಾದರೂ ತೊಂದರೆ ಆಗಿದೆಯೇ ಎಂಬ ಬಗ್ಗೆ ನಾವು ಈಗಾಗಲೇ ಉತ್ತರಪ್ರದೇಶದ ಸರ್ಕಾರದಿಂದ ಮಾಹಿತಿ ಕೇಳಿದ್ದೇವೆ. ಆದರೆ, ಅಲ್ಲಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದ್ದಾರೆ.

ಯುಪಿ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಕಂದಾಯ ಇಲಾಖೆಯ ವತಿಯಿಂದ ಈಗಾಗಲೇ ಯುಪಿ ಸರ್ಕಾರದ ಜೊತೆ ಮಾತುಕತೆ ನಡೆದಿದೆ. ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯದ ಕೆಲವರಿಗೆ ಕಾಲ್ತುಳಿತದಲ್ಲಿ ಗಾಯವಾಗಿದೆ. ಆದರೆ, ಉತ್ತರಪ್ರದೇಶ ಸರ್ಕಾರವು ಇಲ್ಲಿವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-22340676 ಮೂಲಕ ಕನ್ನಡಿಗರು ಸಂಪರ್ಕಿಸಬಹುದು. ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ಈ ಸಹಾಯವಾಣಿ ಮೂಲಕ ನೀಡುವಂತೆ ಕೋರಿದ್ದಾರೆ.

ನಾಲ್ವರು ಸಾವನ್ನಪ್ಪಿರುವ ಶಂಕೆ: ಪ್ರಯಾಗ್‌ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ. ಬೆಳಗಾವಿ ತಾಲ್ಲೂಕು ಯಲ್ಲೂರು ರಸ್ತೆ ವಡಗಾಂವ್ ಭಾಗದ ಮೇಘಾ ದೀಪಕ್ ಹತ್ತರವರ್ (24), ಜ್ಯೋತಿ ದೀಪಕ್ ಹತ್ತರವರ್ (44) ಹಾಗೂ ಬೆಳಗಾವಿ ತಾಲೂಕಿನ ಶೆಟ್ಟಿಗಲ್ಲಿ ಭಾಗದ ಅರುಣಾ ಖೋರ್ಪಡೆ (61), ಮಹಾದೇವಿ ಹಣಮಂತ ಬಾವಣೂರ (48) ಮೃತಪಟ್ಟಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್‌ರಾಜ್ ದುರಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ? ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ ನಾಲ್ಕು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು ಎಂದಿದ್ದಾರೆ.

ಬಿಜೆಪಿ ನಾಯಕರ ಸಹಾಯದಿಂದ ಬೆಳಗಾವಿ ಜಿಲ್ಲೆಯ 300ಕ್ಕಿಂತ ಹೆಚ್ಚು ಜನ ಕುಂಭಮೇಳಕ್ಕೆ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಉತ್ತರ ಪ್ರದೇಶ ಸರ್ಕಾರ ಯಾವುದೇ ಮಾಹಿತಿ ನೀಡದ ಹಿನ್ನೆಲೆ ಕನ್ನಡಿಗರ ಹಿತರಕ್ಷಣೆಗಾಗಿ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹಾಗೂ ಪೊಲೀಸ್ ಅಧಿಕಾರಿಯೊಬ್ಬರನ್ನೊಳಗೊಂಡ ಮೂರು ಜನರ ತಂಡವನ್ನು ಈಗಾಗಲೇ ಪ್ರಯಾಗ್‌ರಾಜ್‌ಗೆ ಕಳಿಸಿದ್ದೇವೆ ಎಂದಿದ್ದಾರೆ.












Click it and Unblock the Notifications