
ಹಿಜಾಬ್ ತೀರ್ಪಿನ ಬಗ್ಗೆ ಅರ್ಜಿದಾರ ಪರ ವಕೀಲ ಇಜಾಜ್ ಮಕ್ಬೂಲ್ ಪ್ರತಿಕ್ರಿಯೆ
ನವದೆಹಲಿ, ಅಕ್ಟೋಬರ್ 13: ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಬೆನ್ನಲ್ಲೇ ಅರ್ಜಿದಾರರ ಪರ ವಕೀಲ ಇಜಾಜ್ ಮಕ್ಬೂಲ್ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ನೇತೃತ್ವದ ವಿಭಾಗೀಯ ಪೀಠವು ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಮೇಲ್ಮನವಿಯನ್ನು ವಜಾಗೊಳಿಸಿದೆ. ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗುವುದು ಎಂದು ಹೇಳಿದೆ.
Breaking: ಸುಪ್ರೀಂಕೋರ್ಟ್ ಹಿಜಾಬ್ ವಿವಾದ ತೀರ್ಪು: ವಿಸ್ತೃತ ಪೀಠಕ್ಕೆ ವರ್ಗಾವಣೆ
"ಈ ಹಿಜಾಬ್ ವಿಷಯವನ್ನು ವಿಸ್ತೃತ ಪೀಠ ಅಂದರೆ ಮೂರು ನ್ಯಾಯಮೂರ್ತಿಗಳ ಪೀಠ ಅಥವಾ ಸಂವಿಧಾನಿಕ ಪೀಠಕ್ಕೆ ವರ್ಗಾಯಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ವಿಷಯವನ್ನಿಟ್ಟಿದ್ದು, ಹೊಸ ಪೀಠ ರಚನೆ ಮಾಡಲಾಗುತ್ತದೆ," ಎಂದು ಅರ್ಜಿದಾರರ ಪರ ವಕೀಲ ಇಜಾಜ್ ಮಕ್ಬೂಲ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ವಿಭಿನ್ನ ಅಭಿಪ್ರಾಯ:
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದರು. ಅದೇ ರೀತಿ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮೇಲ್ಮನವಿಗಳನ್ನು ಅನುಮತಿಸಿದ್ದು, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದರು.
10 ದಿನಗಳಿಂದ ವಾದ ಆಲಿಸಿದ್ದ ವಿಭಾಗೀಯ ಪೀಠ:
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಹಿಜಾಬ್ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಹು ನಿರೀಕ್ಷಿತ ತೀರ್ಪನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 13ರಂದು ನೀಡಿತು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು 10 ದಿನಗಳ ವಾದಗಳನ್ನು ಆಲಿಸಿದ ನಂತರ ಸೆಪ್ಟೆಂಬರ್ 22 ರಂದು ತೀರ್ಪನ್ನು ಕಾಯ್ದಿರಿಸಿತ್ತು.