Arvind Kejriwal Arrest Update: ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ರ್‍ಯಾಲಿ, ಬಿಜೆಪಿ ಮೇಲೆ ಒತ್ತಡ
ನವದೆಹಲಿ, ಮಾರ್ಚ್ 31: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಇಂಡಿಯಾ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ದೆಹಲಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದೇ ವೇಳೆ ಪ್ರತಿಪಕ್ಷಗಳ ಒಕ್ಕೂಟ ಭಾನುವಾರ (ಮಾರ್ಚ್ 31) ಬೃಹತ್ ರ್‍ಯಾಲಿಗೆ ಕರೆ ಕೊಟ್ಟಿದೆ.
ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇಂದಿನ ಬೃಹತ್ ರ್‍ಯಾಲಿಯಲ್ಲಿ ಆಪ್ ನಾಯಕರ ಜೊತೆಗೆ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಇಂದಿನ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸುವ ಜೊತೆಗೆ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನವಾಗಿದೆ.
ಲೋಕತಂತ್ರ ಬಚಾವೋ ರ್‍ಯಾಲಿ ಎಂದು ಕರೆಯಲ್ಪಡುವ ಈ ಪ್ರತಿಭಟನೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಪಕ್ಷಕ್ಕೆ ತೆರಿಗೆ ನೋಟಿಸ್ ಕಳುಹಿಸಿದ ಕೆಲವು ದಿನಗಳ ನಂತರ ಆಯೋಜಿಸಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಮಲೀಲಾ ಮೈದಾನಕ್ಕೆ ಭೇಟಿ ನೀಡಿದ ಹಿರಿಯ ಆಪ್ ನಾಯಕ ಗೋಪಾಲ್ ರೈ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಇತರ ಹಿರಿಯ ನಾಯಕರು ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ತಿಳಿಸಿದೆ.

"ಇದು ವ್ಯಕ್ತಿಗೆ ಸಂಬಂಧಿಸಿದ ರ್‍ಯಾಲಿ ಅಲ್ಲ. ಅದಕ್ಕಾಗಿಯೇ ಇದನ್ನು ಲೋಕತಂತ್ರ ಬಚಾವೋ ರ್‍ಯಾಲಿ ಎಂದು ಕರೆಯುತ್ತಾರೆ. ಇದು ಒಂದು ಪಕ್ಷದ ರ್‍ಯಾಲಿಯಲ್ಲ, ಸುಮಾರು 27 ರಿಂದ 28 ಪಕ್ಷಗಳು ಇದರಲ್ಲಿ ಭಾಗಿಯಾಗಿವೆ. ಭಾರತದ 'ಜನಬಂಧನ್' ನ ಎಲ್ಲಾ ಘಟಕಗಳು ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶೇರ್ ಪವಾರ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ, ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್, ಡಿಎಂಕೆಯ ತಿರುಚಿ ಶಿವ, ಟಿಎಂಸಿಯ ಡೆರೆಕ್ ಒ'ಬ್ರೇನ್ ಮುಂತಾದ ನಾಯಕರು ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ.
ಸೋರೆನ್ ಪತ್ನಿ ಸುನೀತಾ ಕೇಜ್ರಿವಾಲ್ ಭೇಟಿ
ಜೈಲಿನಲ್ಲಿರುವ ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ರ್‍ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅವರು ಶನಿವಾರ ಸುನೀತಾ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಇನ್ನು, ಆಡಳಿತವು 20,000 ಜನರಿಗೆ ರ್‍ಯಾಲಿಗೆ ಬರಲು ಅವಕಾಶ ನೀಡಿದೆ. ಆದರೆ ಪೊಲೀಸರು 30,000ಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆಯಿದೆ ಎಂದಿದ್ದಾರೆ. ಜೊತೆಗೆ ಮಾರ್ಗ ಬದಲಾವಣೆ ಬಗ್ಗೆ ದೆಹಲಿ ಪೊಲೀಸರು ಸಂಚಾರಿ ಸೂಚನೆ ನೀಡಿದ್ದಾರೆ.












Click it and Unblock the Notifications