ದೇಶದ ಒಟ್ಟಾರೆ ಪ್ರಕರಣಗಳಲ್ಲಿ ಕೇರಳ ಒಂದರಲ್ಲೇ 52% ಸಕ್ರಿಯ ಕೊರೊನಾ ಪ್ರಕರಣ
ನವದೆಹಲಿ, ಸೆಪ್ಟೆಂಬರ್ 30: ಕೇರಳ ದೇಶದಲ್ಲಿಯೇ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಜ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಕೇರಳದಲ್ಲಿ ಸದ್ಯ 1,44,000 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದು ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.52ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರದಲ್ಲಿ 40 ಸಾವಿರ ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 17,000, ಮಿಜೋರಾಂನಲ್ಲಿ 16,800 ಹಾಗೂ ಕರ್ನಾಟಕದಲ್ಲಿ 12000, ಆಂಧ್ರಪ್ರದೇಶದಲ್ಲಿ 11,000ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಗುರುವಾರ ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ವ್ಯವಸ್ಥಾಪಕ ನಿರ್ದೇಶಕ ಡಾ. ಬಲರಾಂ ಭಾರ್ಗವ್ ಈ ಕುರಿತು ಮಾತನಾಡಿ, ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಹಾಗೂ ಹಬ್ಬಗಳಲ್ಲಿ ಹೆಚ್ಚು ಮಂದಿ ಸೇರದಂತೆ ಜನರಿಗೆ ಮನವಿ ಮಾಡಿದ್ದಾರೆ.
ಹಬ್ಬಗಳು ಸಮೀಪಿಸುತ್ತಿದ್ದು, ಈ ಸಮಯದಲ್ಲಿ ಜನಸಂದಣಿ ಸೇರುವುದನ್ನು ತಪ್ಪಿಸಬೇಕಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಲು ಎಲ್ಲರಿಗೂ ಮನವಿ ಮಾಡುತ್ತೇವೆ. ಕೊರೊನಾ ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳುವ ಮೂಲಕ ಹಬ್ಬಗಳನ್ನು ಆಚರಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ಜೊತೆಗೆ ದೇಶದ ಇಡೀ ಜನಸಂಖ್ಯೆಗೆ ಸಂಪೂರ್ಣ ಪ್ರಮಾಣದ ಲಸಿಕೆ ನೀಡುವುದು ನಮ್ಮ ಸದ್ಯದ ಆದ್ಯತೆಯಾಗಿದೆ. ವೇಗಗತಿಯಲ್ಲಿ ಲಸಿಕೆ ನೀಡುವ ಅಭಿಯಾನ ಸಾಗುತ್ತಿದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕು:
ದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ದೇಶದಲ್ಲಿ ಗುರುವಾರ 23,529 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 311 ಮಂದಿ ಸೋಂಕಿಗೆ ಬಲಿಯಾಗಿದ್ದರೆ, 28,718 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಇದುವರೆಗೂ 3,30,14,898 ಸೋಂಕಿತರು ಗುಣಮುಖರಾಗಿದ್ದು, 4,48,062 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,77,020 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಒಂದೇ ದಿನ 23,529 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 12,161 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ 311 ಸಾವಿನ ಪ್ರಕರಣ ವರದಿಯಾಗಿದ್ದರೆ, ಅದರಲ್ಲಿ 155 ಸಾವಿನ ಪ್ರಕರಣಗಳು ಕೇರಳದಲ್ಲಿ ವರದಿಯಾಗಿವೆ.
ಭಾರತದಲ್ಲಿ ಗುರುವಾರ 15,06,254 ಜನರ ಮಾದರಿಯನ್ನು ಕೊವಿಡ್-19 ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿದೆ. ಅದೇ ಬುಧವಾರ 15,04,713 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ತಪಾಸಣೆ ಪ್ರಮಾಣದಲ್ಲಿ ಕೇವಲ 1,541 ವ್ಯತ್ಯಾಸವಾಗಿದೆ. ಆದರೆ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ 4,659ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಈವರೆಗೂ 56,89,56,439 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ. ದೇಶದಲ್ಲಿಯೇ ಕೇರಳ ಒಂದರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಪಾಲು 52% ಆಗಿದೆ.
ದೇಶದಲ್ಲಿ 88.34 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65,34,306 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಈವರೆಗೂ 88,34,70,578 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 64,61,13,909 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,67,67,643 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications