ಖುಷಿಯಿಂದ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಜವರಾಯನ ಪಾದ ಸೇರಿದ್ರು; ಭೀಕರ ಅಪಘಾತಕ್ಕೆ BE ವಿಧ್ಯಾರ್ಥಿಗಳು ಬಲಿ

Kerala road accident:ಪ್ರವಾಸದ ಖುಷಿಯಲ್ಲಿ ಕೇರಳಕ್ಕೆ ತೆರಳಿದ್ದ ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪಾಲಿಗೆ ಅದೊಂದು ಕರಾಳ ರಾತ್ರಿ. ಸ್ನೇಹಿತರೊಂದಿಗೆ ಸಂತೋಷದಿಂದ ಪ್ರವಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ-ಪನಂಬಿಕುನ್ನು ಕರಾವಳಿ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನ PSNA College of Engineering and Technology ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅವರ ಸ್ನೇಹಿತರು ಎಂದು ತಿಳಿದುಬಂದಿದೆ. ಮೆಕ್ಯಾನಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಕೇರಳ ಪ್ರವಾಸಕ್ಕೆ ತೆರಳಿದ್ದರು.

Kerala Road Accident Tamil Nadu Engineering Students Killed in Thrissur Car-Truck Crash Into Parked Lorry

Kerala road accident:ಕಾರು ಸಂಪೂರ್ಣ ನಜ್ಜುಗುಜ್ಜು

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಕಾರಿನ ಕೆಲವು ಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆಯಬೇಕಾಯಿತು. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಹೃದಯವಿದ್ರಾವಕ ದೃಶ್ಯಗಳು ಕಂಡುಬಂದಿವೆ.

ಸ್ಥಳದಲ್ಲೇ ಏಳು ಮಂದಿ ಸಾವು

ಅಪಘಾತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತದೇಹಗಳನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮೃತರಲ್ಲಿ ಆರು ಮಂದಿಯನ್ನು ಗುರುತಿಸಲಾಗಿದೆ. ಅವರು ಸಂತೋಷ್ ಜಿ. (20), ಪ್ರಸನ್ನ ಆರ್. (20), ವಿಶ್ವ ವಿ. (20), ಸೂರ್ಯ ಐ. (20), ಯುವಸಂಜಿತ್ ಕೆ. (21) ಹಾಗೂ ಜೋಶುವಾ (20) ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನಿಬ್ಬರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.

ಲಾರಿಗೆ ಡಿಕ್ಕಿ ಹೊಡೆದ ಕಾರು

ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಸಮೀಪ ಈ ಅಪಘಾತ ಸಂಭವಿಸಿದೆ. ಆ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ರಾತ್ರಿ ವೇಳೆ ಸೂಕ್ತ ಎಚ್ಚರಿಕೆ ಸೂಚನೆಗಳಿಲ್ಲದೆ ಲಾರಿಯನ್ನು ನಿಲ್ಲಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ರಸ್ತೆ ಕಾಮಗಾರಿ ನಡೆಯುತ್ತಿದ್ದರೂ ಸೂಕ್ತ ರಸ್ತೆ ಸೂಚನಾ ಫಲಕ, ಬೆಳಕು ಹಾಗೂ ಸುರಕ್ಷತಾ ವ್ಯವಸ್ಥೆ ಕಲ್ಪಿಸದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯ ಜನಪ್ರತಿನಿಧಿಗಳು ಆರೋಪಿಸಿದ್ದಾರೆ.

ಕೇರಳದ ಕ್ರೀಡಾ ಸಚಿವ ಒ.ಜೆ. ಜಾನೀಶ್ ಹಾಗೂ ಕೈಪಮಂಗಲಂ ಶಾಸಕ ಕೆ.ಕೆ. ವಲ್ಸರಾಜ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರದ ವತಿಯಿಂದ ಸೂಚಿಸಲಾಗಿದ್ದರೂ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ.

ಲಾರಿ ಚಾಲಕ ನಾಪತ್ತೆ

ತ್ರಿಶೂರ್ ಗ್ರಾಮಾಂತರ ಎಸ್‌ಪಿ ಮೊಹಮ್ಮದ್ ನದೀಮುಡ್ಡೀನ್ ಅವರು ಲಾರಿ ಚಾಲಕ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಆತನನ್ನು ಪತ್ತೆಹಚ್ಚಿ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ನೋಂದಣಿ ಹೊಂದಿರುವ ಲಾರಿಯ ಮಾಲೀಕರನ್ನು ಪೊಲೀಸರು ಗುರುತಿಸಿದ್ದಾರೆ.

ಆಸ್ಪತ್ರೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಮೃತ ವಿದ್ಯಾರ್ಥಿಗಳ ಕುಟುಂಬಸ್ಥರು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಧಾವಿಸಿದ್ದು, ಆಸ್ಪತ್ರೆಯಲ್ಲಿ ಪೋಷಕರು, ಸಂಬಂಧಿಕರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು. ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಿದ್ದ ಪೋಷಕರು, ಕೆಲವೇ ಗಂಟೆಗಳಲ್ಲಿ ಅವರ ಮೃತದೇಹವನ್ನು ನೋಡಬೇಕಾದ ದುಃಖದ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾಧಿಕಾರಿ ಶಿಖಾ ಸುರೇಂದ್ರನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ಮೃತದೇಹಗಳನ್ನು ತಮಿಳುನಾಡಿಗೆ ಕೊಂಡೊಯ್ಯಲು ರಾಜ್ಯ ಸರ್ಕಾರ ಅಗತ್ಯ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಸ್ನೇಹಿತರೊಂದಿಗೆ ಸಂತಸದ ಕ್ಷಣಗಳನ್ನು ಕಳೆಯಲು ಕೇರಳದತ್ತ ಹೊರಟಿದ್ದ ಯುವ ಜೀವಗಳು, ಮಧ್ಯರಾತ್ರಿಯ ಭೀಕರ ಅಪಘಾತದಲ್ಲಿ ಜವರಾಯನ ಪಾದ ಸೇರಿರುವುದು ದುರಂತದ ಕರಾಳತೆಗೆ ಸಾಕ್ಷಿಯಾಗಿದೆ. ಕುಟುಂಬಗಳ ಭವಿಷ್ಯದ ಕನಸುಗಳಾಗಿದ್ದ ಎಂಟು ವಿದ್ಯಾರ್ಥಿಗಳ ಅಕಾಲಿಕ ಸಾವು ಶೋಕದ ವಾತಾವರಣ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+