Lok Sabha Election 2024 Result: ಆಂಧ್ರ ಕಾಂಗ್ರೆಸ್ ಅಧ್ಯಕ್ಷೆಗೆ ಮುಖಭಂಗ
ಅಮರಾವತಿ, ಜೂನ್ 04; ಲೋಕಸಭೆ ಚುನಾವಣೆ 2024ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಆಂಧ್ರ ಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಸ್ಥಾನದಲ್ಲಿ ಜಯಗಳಿಸಲು ಸಾಧ್ಯವಾಗಿಲ್ಲ. ರಾಜ್ಯದ ಪಕ್ಷದ ಅಧ್ಯಕ್ಷೆಗೆ ಸಹ ಹೀನಾಯ ಸೋಲಾಗಿದೆ.
ಮಂಗಳವಾರ ಆಂಧ್ರ ಪ್ರದೇಶ ಲೋಕಸಭೆ ಚುನಾವಣೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಿದೆ. ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಸೋಲು ಕಂಡಿದ್ದಾರೆ.

2024ರ ಜನವರಿಯಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್ ಸೇರಿದ್ದರು. ಪಕ್ಷ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.
ಕಡಪದಿಂದ ಕಣಕ್ಕೆ: ಈ ಬಾರಿಯ ಲೋಕಸಭಾ ಚುನಾವಣೆಗೆ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಕಡಪ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಅವರು 141039 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಕಡಪ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ವೈ. ಎಸ್. ಅವಿನಾಶ್ ರೆಡ್ಡಿ 605143 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಟಿಡಿಪಿಯ ಸಿ. ಬಿ. ಸುಬ್ಬಾಮಿ ರೆಡ್ಡಿ 542448 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದಾರೆ.
ಪಕ್ಷವನ್ನು ವಿಲೀನಗೊಳಿಸಿದ್ದರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್. ರಾಜಶೇಖರ್ ರೆಡ್ಡಿ ಪುತ್ರಿ ಮತ್ತು ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್ ಸೇರಿದ್ದರು. ಬಳಿಕ ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.
ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಆಂಧ್ರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು.
ಮತ್ತೊಂದು ಕಡೆ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಹೀನಾಯ ಸೋಲು ಕಂಡಿದ್ದಾರೆ. ಪಕ್ಷ ರಾಜ್ಯದಲ್ಲಿ 4 ಸ್ಥಾನಗಳಲ್ಲಿ ಜಯಗಳಿಸಿದೆ. ಟಿಡಿಪಿ 16, ಬಿಜೆಪಿ 3, ಜೆಎನ್‌ಪಿ 2 ಸ್ಥಾನಗಳಲ್ಲಿ ಜಯಗಳಿಸಿದೆ.












Click it and Unblock the Notifications