ಬಿಜೆಪಿ ಪ್ರಣಾಳಿಕೆ : ಮತ್ತೆ ರಾಮ ಮಂದಿರ ನಿರ್ಮಾಣದ ಸಂಕಲ್ಪ
ಬೆಂಗಳೂರು, ಏಪ್ರಿಲ್ 08 : ಆಡಳಿತಾರೂಢ ಬಿಜೆಪಿ 2019ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ. 'ಸಂಕಲ್ಪ ಪತ್ರ' ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ರಾಮ ಮಂದಿರದ ಜಪ ಮಾಡಲಾಗಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 12 ಜನರ ಸಮಿತಿ ತಯಾರಿಸಿದ 45 ಪುಟಗಳ ಪ್ರಣಾಳಿಕೆಯನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಡುಗಡೆ ಮಾಡಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ಮತ್ತೆ ರಾಮ ಮಂದಿರ ನಿರ್ಮಾಣದ ಜಪವನ್ನು ಮಾಡಲಾಗಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ರಾಜನಾಥ್ ಸಿಂಗ್ ಅವರು, 'ನಾವು ಅಧಿಕಾರಕ್ಕೆ ಬಂದರೆ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ ಮಾಡಲು ಪ್ರಯತ್ನ ನಡೆಸುತ್ತೇವೆ' ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಮಾತಿಗೆ ನಾವು ಬದ್ಧರಾಗಿದ್ದೇವೆ. ಸಂವಿಧಾನದಡಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತೇವೆ ಎಂದು ಭರವಸೆ ನೀಡಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಮಂದಿರ ನಿರ್ಮಾಣದ ಸ್ಥಳದ ವಿಚಾರದಲ್ಲಿ ಇರುವ ವಿವಾದವನ್ನು ಸೌಹಾರ್ಯಯುತವಾಗಿ ಬಗೆಹರಿಸಿಕೊಳ್ಳಲು ನ್ಯಾಯಾಲಯ ಸಲಹೆ ನೀಡಿದೆ.
ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, 'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ. ಬೇರೆ ಪಕ್ಷಕ್ಕೆ ಅದು ಸಾಧ್ಯವಿಲ್ಲ. ಅದರಲ್ಲಿ ಯಾವುದೇ ಸಂದೇಹ ಬೇಡ' ಎಂದು ಹೇಳಿದ್ದರು.












Click it and Unblock the Notifications