Madhya Pradesh; ಬುಧ್ನಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಮುನ್ನಡೆ
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ 95, ಕಾಂಗ್ರೆಸ್ 92 ಕ್ಷೇತ್ರದಲ್ಲಿ ಮುನ್ನಡೆಯಲ್ಲಿವೆ.
ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 2024ರ ಲೋಕಸಭಾ ಚುನಾವಣೆಗೆ ಮೊದಲು ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು. ಆದ್ದರಿಂದ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷ ಬಿಜೆಪಿ. ಬಿಜೆಪಿಯ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿಕ್ರಂ ಮಸ್ತಲ್ ಶರ್ಮಾ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬುಧ್ನಿಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ವಿರುದ್ಧ ವಿಕ್ರಂ ಮಸ್ತಲ್ ಶರ್ಮಾ ಕಣಕ್ಕಿಳಿಸಿದೆ. ನಟರಾದ ಶರ್ಮಾ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ ಎಂದು ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು.
ರಾಜ್ಯದಲ್ಲಿ ಬಿಜೆಪಿಯ ಶಿವರಾಜ್ ಸಿಂಗ್ ಚೌವ್ಹಾಣ್, ಕಾಂಗ್ರೆಸ್ ಕಮಲ್ ನಾಥ್ ಪ್ರಮುಖ ನಾಯಕರು. ಕಾಂಗ್ರೆಸ್ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಈ ಬಾರಿಯ ವಿಧಾನಸಭೆ ಚುನಾವಣೆಯನ್ನು ಎದುರಿಸಿವೆ.
2018ರಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಬಹುಮತ ಸಿಕ್ಕಿರಲಿಲ್ಲ. ಎಸ್ಪಿ, ಬಿಎಸ್ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತು. ಕಮಲ್‌ನಾಥ್ ಮುಖ್ಯಮಂತ್ರಿಯಾದರು. ಆದರೆ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ 22 ಶಾಸಕರು ಅವರ ಜೊತೆ ಹೋದರು. ಆಗ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡು ಸರ್ಕಾರ ಪತನವಾಯಿತು.
ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾದರು. ಈಗ 2024ರ ಲೋಕಸಭೆ ಚುನಾವಣೆಗೆ ಮೊದಲು ರಾಜ್ಯದ ವಿಧಾನಸಭೆ ಚುನಾವಣೆ ನಡೆದಿದೆ. ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಹಿಡಿಯಲಿದೆ.












Click it and Unblock the Notifications