Maharashtra Assembly Elections 2024: ಮಹಾರಾಷ್ಟ್ರ ಚುನಾವಣೆ ಮುಂಬೈನಲ್ಲಿ ಮಹತ್ವದ ಸಭೆ
ಮುಂಬೈ, ಸೆಪ್ಟೆಂಬರ್ 24: ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಚರ್ಚೆಗಳು ಆರಂಭವಾಗಿದೆ. ಚುನಾವಣಾ ಆಯೋಗವು ಸಹ ತಯಾರಿಯನ್ನು ಆರಂಭಿಸಿದೆ. ಮಹಾರಾಷ್ಟ್ರ ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಎರಡು ದಿನಗಳ ಕಾಲ ಮುಂಬೈಗೆ ಭೇಟಿ ನೀಡಲಿದ್ದು, ಮಹತ್ವದ ಸಭೆಯನ್ನು ನ ಡೆಸಲಿದೆ.
ಮಹಾರಾಷ್ಟ್ರದಲ್ಲಿ ಸದ್ಯ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯ ಸರ್ಕಾರದ ಅವಧಿ ನವೆಂಬರ್-2024ರ ಅಂತ್ಯಕ್ಕೆ ಪೂರ್ಣಗೊಳ್ಳುತ್ತದೆ. ಅಷ್ಟರೊಳಗೆ ಚುನಾವಣೆ ನಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕು.

ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣಾ ತಯಾರಿಯಲ್ಲಿ ತೊಡಗಿವೆ. ಮಹಾರಾಷ್ಟ್ರ ರಾಜ್ಯದ ಚುನಾವಣಾ ಆಯೋಗ ಸಹ ಚುನಾವಣೆಗಾಗಿ ತಯಾರಿ ಆರಂಭಿಸಿದ್ದು, ಈಗಾಗಲೇ ಸಂಭಾವ್ಯ ವೇಳಾಪಟ್ಟಿಯನ್ನು ಸಿದ್ಧಗೊಳಿಸಿದೆ. ಇದಕ್ಕೆ ಕೇಂದ್ರ ಚುನಾವಣಾ ಆಯೋಗದ ಒಪ್ಪಿಗೆ ಬೇಕಾಗಿದೆ.
ಆಯೋಗದ ಅಧಿಕಾರಿಗಳ ಭೇಟಿ: ಮುಂಬೈಗೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೆಪ್ಟೆಂಬರ್ 27, 28ರಂದು ಭೇಟಿ ನೀಡಲಿದೆ. ಎರಡು ದಿನಗಳ ಕಾಲ ರಾಜ್ಯ ಚುನಾವಣಾ ಆಯೋಗ, ಪೊಲೀಸ್ ಇಲಾಖೆ, ರಾಜಕೀಯ ಪಕ್ಷಗಳ ಜೊತೆ ಅಧಿಕಾರಿಗಳು ಚುನಾವಣಾ ದಿನಾಂಕ, ಸಿದ್ಧತೆಗಳ ಕುರಿತು ಮಹತ್ವದ ಸಭೆಯನ್ನು ನಡೆಸಲಿದ್ದಾರೆ.
ಸದ್ಯ ಹರ್ಯಾಣ ಮತ್ತು ಜಮ್ಮ & ಕಾಶ್ಮೀರದ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಚುನಾವಣಾ ಫಲಿತಾಂಶ ಅಕ್ಟೋಬರ್ 8ರಂದು ಪ್ರಕಟವಾಗುತ್ತಿದೆ. ಈ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದಿನಾಂಕಗಳನ್ನು ಆಯೋಗ ಅಂತಿಮಗೊಳಿಸಲಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳ ಚುನಾವಣಾ ತಯಾರಿಯೂ ಜೋರಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಮಾತುಕತೆ ಆರಂಭಿಸಿದೆ.
ಮತ್ತೊಂದು ಕಡೆ ರಾಜ್ಯದಲ್ಲಿ ವಿರೋಧ ಪಕ್ಷಗಳ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ಸಹ ತಯಾರಿ ಆರಂಭಿಸಿದೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಇದಾಗಿದ್ದು, ಈ ಬಾರಿಯೂ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿವೆ.
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸದಸ್ಯ ಬಲ 288. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. ಚುನಾವಣಾ ಪೂರ್ವ ಸಮೀಕ್ಷೆಗಳು ಈಗಾಗಲೇ ರಾಜ್ಯದಲ್ಲಿ ಚುನಾವಣೆ ನಡೆದರೆ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿವೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಅಸಮಾಧಾನಗೊಂಡಿರುವ ನಾಯಕರನ್ನು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ ಚುನಾವಣೆಯಲ್ಲಿ ಹಿನ್ನಡೆ ಉಂಟಾಗದಂತೆ ಎಚ್ಚರವಹಿಸುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಅಕ್ಟೋಬರ್ 31 ರಿಂದ ನವೆಂಬರ್ 3ರ ತನಕ ದೀಪಾವಳಿ ಹಬ್ಬವಿದೆ. ಚುನಾವಣೆ ದಿನಾಂಕ ಅಕ್ಟೋಬರ್‌ನಲ್ಲಿ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದರೂ ಸಹ ದೀಪಾವಳಿ ಹಬ್ಬದ ಬಳಿಕವೇ ಮತದಾನ ನಡೆಯಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications