Maharashtra Assembly Elections 2024: ಮಹಾಯತಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ
ಮುಂಬೈ, ಅಕ್ಟೋಬರ್ 03: ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ಕ್ಕೆ ಬಿಜೆಪಿ ನೇತೃತೃತ್ವದ 'ಮಹಾಯತಿ' ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. 'ಮಹಾಯತಿ' ಮತ್ತು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಗಳು ಚುನಾವಣೆಯಲ್ಲಿ ಎದುರಾಳಿಗಳು.
ಸದ್ಯ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರವೇ ಅಧಿಕಾರದಲ್ಲಿದೆ. ಮುಂಬರುವ ಚುನಾವಣೆಯನ್ನು ಸಹ ಮೈತ್ರಿಕೂಟದ ಮೂಲಕವೇ ಎದುರಿಸುವುದಾಗಿ ಮೂರು ಪಕ್ಷಗಳು ಘೋಷಣೆ ಮಾಡಿವೆ.

ಮೂರು ಪಕ್ಷಗಳ ನಾಯಕರ ನಡುವಿನ ಸರಣಿ ಸಭೆಗಳ ಬಳಿಕ 'ಮಹಾಯುತಿ' ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮವಾಗಿದೆ. ಮೈತ್ರಿಕೂಟದ ನೇತಾರ ಪಕ್ಷವಾಗಿರುವ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ ಸೀಟುಗಳು ಎನ್‌ಸಿಪಿ (ಅಜಿತ್ ಪವಾರ್ ಬಣ) ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ)ಕ್ಕೆ ಹಂಚಿಕೆಯಾಗಿವೆ.
ಯಾರಿಗೆ ಎಷ್ಟು ಸೀಟು?; ರಾಷ್ಟ್ರೀಯ ಮಾಧ್ಯಮಗಳ ಸದ್ಯದ ವರದಿ ಪ್ರಕಾರ ಬಿಜೆಪಿ 150-155 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಶಿವಸೇನೆ (ಏಕನಾಥ್ ಶಿಂಧೆ) 90-95 ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) 40-45 ಸೀಟುಗಳಲ್ಲಿ ಕಣಕ್ಕಿಳಿಯಲಿದೆ. ಸೀಟು ಹಂಚಿಕೆ ಬಹುತೇಕ ಅಂತಿಮಗೊಂಡಿದ್ದು, ರಾಷ್ಟ್ರೀಯ ನಾಯಕರ ಒಪ್ಪಿಗೆ ಬಳಿಕ ಅಧಿಕೃತ ಘೋಷಣೆ ಮಾಡಲಾಗುತ್ತದೆ.
ಹಲವು ಸುತ್ತಿನ ಸಭೆಗಳ ಬಳಿಕ 'ಮಹಾಯುತಿ' ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಳಿಸಿದೆ. ಅಲ್ಲದೇ ಚುನಾವಣಾ ದಿನಾಂಕವನ್ನು ಘೋಷಣೆ ಮಾಡುವ ಮೊದಲೇ ಮೈತ್ರಿಕೂಟ ಸೀಟು ಹಂಚಿಕೆಯನ್ನು ಪ್ರಕಟಿಸಲಿದೆ ಎಂಬ ಮಾಹಿತಿ ಸಿಕ್ಕಿದೆ. ಪ್ರಮುಖ ಸೀಟುಗಳ ಕುರಿತು ಚರ್ಚೆಗಳು ಮುಗಿದಿವೆ. 25 ಸೀಟುಗಳ ಕುರಿತು ಅಂತಿಮ ತೀರ್ಮಾನ ಬಾಕಿ ಇದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಮೂರು ಪಕ್ಷಗಳು ಸಮೀಕ್ಷೆಗಳನ್ನು ನಡೆಸಿ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ತೀರ್ಮಾನವನ್ನು ಮಾಡಿವೆ. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಮೊದಲ ಮಾನದಂಡವಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಸಹ ಮೂರು ಪಕ್ಷದಲ್ಲಿ ತೀರ್ಮಾನವಾಗಿದೆ. ಶೇ 5-10ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಸದ್ಯ ಮಾಹಿತಿ ಸಿಕ್ಕಿದೆ.
2019ರ ವಿಧಾನಸಭೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ, ಶರದ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿ ಒಗ್ಗಟ್ಟಿನಿಂದ ಇದ್ದವು. ಚುನಾವಣಾ ಫಲಿತಾಂಶದ ಚಿತ್ರಣವೇ ಬೇರೆಯಾಗಿತ್ತು. ಈಗ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ)ವಾಗಿದೆ. ಆದ್ದರಿಂದ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಚುನಾವಣೆಯಲ್ಲಿ 'ಮಹಾಯುತಿ' ಮೈತ್ರಿಕೂಟ ಎದುರಿಸಲು ವಿರೋಧ ಪಕ್ಷಗಳು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ರಚನೆ ಮಾಡಿಕೊಂಡಿವೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟವಿದು. ಈ ಮೈತ್ರಿಕೂಟದಲ್ಲಿ ಹೆಚ್ಚಿನ ಸೀಟುಗಳು ಕಾಂಗ್ರೆಸ್ ಪಕ್ಷಕ್ಕೆ ಸಿಗುವ ನಿರೀಕ್ಷೆ ಇದೆ. ಶರದ್ ಪವಾರ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.












Click it and Unblock the Notifications