101 ಸೀಟುಗಳಲ್ಲಿ ಸ್ಪರ್ಧೆ, 16 ಸೀಟು ಗೆಲುವು, ಕಾಂಗ್ರೆಸ್ ಅಧ್ಯಕ್ಷ ಸ್ಥಾನವೇ ಬೇಡ ಎಂದ ನಾಯಕ
ಮುಂಬೈ, ಡಿಸೆಂಬರ್ 14: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ 2024ರ ಬಳಿಕ 'ಮಹಾಯತಿ' ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಡಿಸೆಂಬರ್ 5ರಂದು ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಳು. ಖಾತೆ ಹಂಚಿಕೆ, ಸಂಪುಟ ವಿಸ್ತರಣೆ ಇನ್ನೂ ಸಹ ನಡೆಯಬೇಕಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಬಿಜೆಪಿ ನೇತೃತ್ವದ 'ಮಹಾಯತಿ' ಮೈತ್ರಿಕೂಟಕ್ಕೆ ಎದುರಾಳಿಯಾಗಿತ್ತು. ಆದರೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 132 ಸೀಟುಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೆ 'ಮಹಾಯತಿ' ಮೈತ್ರಿಕೂಟ ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿ ಬದಲಾವಣೆ ಮಾಡಿದ್ದು, ಈ ಬಾರಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ.

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲ 288. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರುವುದು ಕೇವಲ 16 ಸೀಟು. ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ್ದು, ಇದರಿಂದಾಗಿ ಎಂವಿಎ ಮೈತ್ರಿಕೂಟದಲ್ಲಿಯೂ ಅಪಸ್ವರ ಎದ್ದಿದೆ. ಈಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಜೀನಾಮೆಯ ಮಾತನಾಡಿದ್ದಾರೆ.
ಕೇಂದ್ರ ನಾಯಕರಿಗೆ ಪತ್ರ: ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರವೊಂದನ್ನು ಬರೆದಿದ್ದಾರೆ. ಚುನಾವಣೆ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ, ಹೈಕಮಾಂಡ್ ನಾಯಕರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಎಂವಿಎ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿತ್ತು. 101 ಸೀಟುಗಳಲ್ಲಿ ಕಣಕ್ಕಿಳಿದಿದ್ದ ಪಕ್ಷ ಗೆದ್ದಿದ್ದು ಕೇವಲ 16 ಸೀಟು. ಇದರಿಂದಾಗಿ ನಾನಾ ಪಟೋಲೆ ಅಧ್ಯಕ್ಷ ಸ್ಥಾನ ತೊರೆಯುವ ಮಾತನಾಡಿದ್ದಾರೆ.
ಚುನಾವಣೆಯಲ್ಲಿ ಸ್ವತಃ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಪ್ರಯಾಸದ ಗೆಲುವು ಕಂಡಿದ್ದರು. ಸಕೋಲಿ ಕ್ಷೇತ್ರದ ಅಭ್ಯರ್ಥಿಯಾದ ಅವರು 96,795 ಮತಗಳನ್ನು ಪಡೆದು ಕೇವಲ 208 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿ ಅಭ್ಯರ್ಥಿ ಅವಿನಾಶ್ ಆನಂದ್‌ರಾವ್ ಬ್ರಹ್ಮನ್‌ಕರ್ 96,587 ಮತಗಳನ್ನು ಪಡೆದು ಪ್ರಬಲ ಪೈಪೋಟಿ ನೀಡಿದ್ದರು.
ಮಹಾರಾಷ್ಟ್ರದ ಚುನಾವಣೆಯ ಸೀಟು ಹಂಚಿಕೆಯಲ್ಲಿಯೇ ಗೊಂದಲವಾಗಿತ್ತು. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕಗ್ಗಂಟ್ಟಾಗಿತ್ತು. ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸೀಟು ಹಂಚಿಕೆ ವಿಚಾರದಲ್ಲಿ ನಾನಾ ಪಟೋಲೆ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಕೇಂದ್ರ ನಾಯಕರಿಗೂ ಸಂದೇಶ ರವಾನೆ ಮಾಡಿದ್ದರು.
ಅಂತಿಮವಾಗಿ ಎನ್‌ಸಿಪಿ (ಶರದ್ ಪವಾರ್) ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಲಾಗಿತ್ತು. ಎಂವಿಎ ಮೈತ್ರಿಕೂಟದಲ್ಲಿ ಅತಿ ಹೆಚ್ಚು ಸೀಟು (101) ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಟ್ಟರು ಸಹ ಪಕ್ಷ ಚುನಾವಣೆಯಲ್ಲಿ ಗೆದ್ದಿದ್ದು ಕೇವಲ 16 ಸೀಟು. ಆದ್ದರಿಂದ ಈಗ ನಾನಾ ಪಟೋಲೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ತೊರೆಯುವ ಮಾತನಾಡುತ್ತಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಬಳಿಕ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಕಾಂಗ್ರೆಸ್ ಪಕ್ಷದಿಂದ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ನಾನಾ ಪಟೋಲೆ ರಾಜ್ಯಾಧ್ಯಕ್ಷ ಸ್ಥಾನ ತೊರೆಯುಲು ಮುಂದಾಗಿದ್ದಾರೆ. ಇದಕ್ಕೆ ಹೈಕಮಾಂಡ್ ನಾಯಕರ ಒಪ್ಪಿಗೆ ನೀಡಲಿದ್ದಾರೆಯೇ? ಕಾದು ನೋಡಬೇಕಿದೆ.
'ಮಹಾಯತಿ' ಮೈತ್ರಿಕೂಟದಲ್ಲಿ ಬಿಜೆಪಿ 132 ಸೀಟುಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಹೊಂದಿವೆ. ಆದ್ದರಿಂದ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ.












Click it and Unblock the Notifications