ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ದುರ್ಮರಣ; ರಾಜಕೀಯ ಗಣ್ಯರ ಸಂತಾಪ
ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಪ್ರಯಾಣಿಕರು ಸಾವು ಕಂಡಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪರವಾರ್ ಸೇರಿದಂತೆ 5 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತು ಎಂದು ತಿಳಿಸಲಾಗಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ, ಪ್ರಚಾರಕ್ಕಾಗಿ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ವೇಳೆ ಅವಘಡದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮೃತಪಟ್ಟಿದ್ದಾರೆ. ಇನ್ನೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಜಿತ್ ಪವಾರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು. ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.
ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಸುನೇತ್ರಾ ಪವಾರ್ ಅವರು, ಸುಪುತ್ರ ಶ್ರೀ ಪಾರ್ಥ್ ಪವಾರ್ ಅವರು ಮತ್ತು ಇಡೀ ಕುಟುಂಬಕ್ಕೆ, ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಇಂದು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನ ಹೊಂದಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ. ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅಜಿತ್ ಪವಾರ ಅವರು, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತ ಬೆಂಬಲಿಸಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ಅಗಲಿಕೆಯಿಂದ ಮಹಾರಾಷ್ಟ್ರ ರಾಜಕಾರಣ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ವಿಮಾನ ಅಪಘಾತದಿಂದ ಆಘಾತ ಮತ್ತು ತೀವ್ರ ದುಃಖವಾಗಿದೆ. ಅವರ ಹಠಾತ್ ನಿಧನವು ಸಾರ್ವಜನಿಕ ಜೀವನ ಮತ್ತು ಮಹಾರಾಷ್ಟ್ರ ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ, ಅಲ್ಲಿ ಅವರು ಅನುಭವ ಮತ್ತು ದೃಢಸಂಕಲ್ಪದಿಂದ ಸೇವೆ ಸಲ್ಲಿಸಿದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಈ ದುಃಖದ ಸಮಯದಲ್ಲಿ ಶಕ್ತಿಗಾಗಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಅವರ ಪ್ರೀತಿಪಾತ್ರರು ಈ ಸರಿಪಡಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಪಡೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
ಅಜಿತ್ ಪವಾರ್ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಜೊತೆಗೆ ಸುದೀರ್ಘ ಕಾಲ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು. ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಅಜಿತ್ ದಾದಾ ಎಂದೇ ಹೆಸರಾಗಿದ್ದರು. ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡ ಸುದ್ದಿಕೇಳಿ ಅಘಾತವಾಯಿತು ಎಂದು ತಿಳಿಸಿದ್ದಾರೆ.
ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದ ವಿಮಾನ ಅಪಘಾತ ಅಜಿತ್ ಪವಾರ್ ಸೇರಿ ವಿಮಾನದಲ್ಲಿ ಇದ್ದ 5 ಪ್ರಯಾಣಿಕರು ಮೃತಪಟ್ಟಿದ್ದಾರೆ...
— oneindiakannada (@OneindiaKannada) January 28, 2026
#BreakingNews #AjitPawar #AjitPawarPlaneCrash #BaramatiIncident #MaharashtraNews #NewsUpdate #OIKannada #Oneindia pic.twitter.com/Sq4TCNi8pY
ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ರಾಜಕೀಯ ವಲಯದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದ ಅಜಿತ್ ದಾದಾ, ಅವರ ನಿಧನದ ಸುದ್ದಿಯನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ, ಎನ್‌ಸಿಪಿ (ಎಪಿ) ಪಕ್ಷದ ಕಾರ್ಯಕರ್ತರಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications