Maharashtra assembly election 2024: 60 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ನಿರ್ಮಾಣ, ಯಾಕೆ
ಮಹಾರಾಷ್ಟ್ರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಯನ್ನು ಕಳೆದ ಬಾರಿಗಿಂತಲೂ ದೊಡ್ಡದಾಗಿ ಹಾಗೂ ಭಾರೀ ವೆಚ್ಚದಲ್ಲಿ ನಿರ್ಮಾಣ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರದಲ್ಲಿ ಇನ್ನು ಕಲವೇ ದಿನಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗವು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ನಡುವೆ ವಿವಿಧ ರಾಜಕೀಯ ಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿಕೊಳ್ಳುತ್ತಿವೆ.
ಮಹಾರಾಷ್ಟ್ರ ರಾಜಕೀಯ ಹಾಗೂ ಸಾಮಾಜಿಕ ಜೀವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ವಿಶೇಷ ಸ್ಥಾನವಿದೆ. ಎಲ್ಲರೂ ಶಿವಾಜಿ ಮಹಾರಾಜರ ಬಗ್ಗೆ ಗೌರವ ಹೊಂದಿದ್ದಾರೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ನಲ್ಲಿ 35 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಆದರೆ, ಒಂದು ವರ್ಷದ ಒಳಗೆ ಈ ಬೃಹತ್ ಪ್ರತಿಮೆ ಕುಸಿದಿತ್ತು. ಇದಕ್ಕೆ ಮಹಾರಾಷ್ಟ್ರದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತವಾಗಿದಕ್ಕೆ ಕ್ಷಮೆ ಕೇಳಿದ್ದರು. ಇದೀಗ ಅದೇ ಜಾಗದಲ್ಲಿ ಬೃಹತ್ ಶಿವಾಜಿ ಪ್ರತಿಮೆ ನಿರ್ಮಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಪ್ರತಿಮೆ ಕುಸಿತ
ಮಹಾರಾಷ್ಟ್ರದಲ್ಲಿ ಶಿವಾಜಿ ಪ್ರತಿಮೆ ಕುಸಿತ ವಿಚಾರವು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಪ್ರತಿಮೆ ಕುಸಿತದಿಂದಾಗಿ ಬಿಜೆಪಿ ಕೇಂದ್ರ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿತ್ತು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಕ್ಷಮೆ ಕೇಳುವಂತಾಗಿತ್ತು. ಪ್ರತಿಮೆ ಕುಸಿತವಾಗಿದ್ದನ್ನು ಮಹಾರಾಷ್ಟ್ರದ ವಿರೋಧ ಪಕ್ಷದ ಒಕ್ಕೂಟಗಳು ತೀವ್ರವಾಗಿ ಖಂಡಿಸಿದ್ದವು. ಶಿವಾಜಿ ಮಹಾರಾಜರಿಗೆ ಅವಮಾನ ಮಾಡುವುದನ್ನು ನಾವು ಸಹಿಸುವುದಿಲ್ಲ ಎಂದು ವಿಪಕ್ಷಗಳ ಒಕ್ಕೂಟ (ಕಾಂಗ್ರೆಸ್, ಶಿವಸೇನೆ (ಉದ್ಧವ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್ ಪವಾರ್ ಬಣ) ಆಗ್ರಹಿಸಿದ್ದವು. ಅಲ್ಲದೇ ಬೃಹತ್ ಪ್ರತಿಭಟನೆಗಳನ್ನು ಸಹ ನಡೆಸಿದ್ದವು. ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಭಾವಚಿತ್ರಕ್ಕೆ ಶೂನಿಂದಲೂ ಹೊಡೆದಿದ್ದರು.

ಈಗ 60 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ನಿರ್ಮಾಣ
35 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತವಾದ ಮೇಲೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಈ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆ ಇರಿಸುತ್ತಿದ್ದು, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕಾಲಮಿತಿಯಲ್ಲಿ ನಿರ್ಮಾಣ ಮಾಡಲು ಮುಂದಾಗಿದೆ. ಶಿವಾಜಿ ಅವರ ಪ್ರತಿಮೆ ಕುಸಿತವಾದ ಜಾಗದಲ್ಲೇ ಇದೀಗ ಬರೋಬ್ಬರಿ 20 ಕೋಟಿ ರೂಪಾಯಿ ವೆಚ್ಚದಲ್ಲಿ 60 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲು ಬಿಡ್ ಕರೆಯಲಾಗುತ್ತಿದೆ. ಈ ಪ್ರತಿಮೆ ಮುಂದಿನ ಆರು ತಿಂಗಳಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಲಾಗಿದೆ. ಕನಿಷ್ಠ 100 ವರ್ಷಗಳ ವರೆಗೆ ಈ ಪ್ರತಿಮೆ ಬಲಿಷ್ಠವಾಗಿರಬೇಕು ಎಂದು ಟೆಂಡರ್‌ನಲ್ಲಿ ಷರತ್ತು ವಿಧಿಸಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications