
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರಕ್ಕೆ ವೇದಿಕೆ ಸಜ್ಜು
ನವದೆಹಲಿ, ಅಕ್ಟೋಬರ್ 26: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ತಲುಪಿದ್ದು, ಖರ್ಗೆ ಜೊತೆ ಸಂತಸದ ಕ್ಷಣದಲ್ಲಿ ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಎಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು, ಮಾಜಿ ಸಿಎಂಗಳು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಇತರ ಎಐಸಿಸಿ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಎಲ್ಲಾ ಪ್ರಮುಖ ಮುಖಂಡರಿಗೆ ಆಹ್ವಾನವನ್ನು ಕಳುಹಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಕುರಿತು ವ್ಯಂಗ್ಯವಾಡಿದ ಡಿಎಂಕೆ ವಕ್ತಾರ ಅಮಾನತು
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸಲಿದ್ದಾರೆ. ನನ್ನನ್ನೂ ಈ ಸಂದರ್ಭದಲ್ಲಿ ಹಾಜರಿರುವಂತೆ ಕೋರಲಾಗಿದೆ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಅವರು ರಾಯ್‌ಪುರದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಯ ಸ್ಪರ್ಧೆಯಲ್ಲಿ ಖರ್ಗೆ ಅವರು ತಮ್ಮ ಎದುರಾಳಿ ಶಶಿ ತರೂರ್ ಅವರನ್ನು ಭಾರಿ ಅಂತರದಿಂದ ಸೋಲಿಸಿದರು, ಈ ಮೂಲಕ 24 ವರ್ಷಗಳ ನಂತರ ಅಧಿಕಾರ ವಹಿಸಿಕೊಂಡ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಧ್ಯಕ್ಷೀಯ ಸ್ಪರ್ಧೆಯಲ್ಲಿ ಖರ್ಗೆ 7,897 ಮತಗಳನ್ನು ಪಡೆದರೆ, ಅಕ್ಟೋಬರ್ 17 ರಂದು ನಡೆದ ಮತದಾನದಲ್ಲಿ ಅವರ ಎದುರಾಳಿ ತರೂರ್ 1,072 ಮತಗಳನ್ನು ಪಡೆದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಖರ್ಗೆ ಮಾತನಾಡಿ, ''ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎನ್ನುವ ಸಂದರ್ಭದಲ್ಲಿ ಪಕ್ಷವು ಸಾಂಸ್ಥಿಕ ಚುನಾವಣೆಗಳನ್ನು ನಡೆಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಉದಾಹರಣೆಯನ್ನು ನೀಡಿದೆ. ದೇಶದ 75 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ನಿರಂತರವಾಗಿ ಬಲಪಡಿಸಿದೆ ಮತ್ತು ಸಂವಿಧಾನವನ್ನು ರಕ್ಷಿಸಿದೆ'' ಎಂದು ಹೇಳಿದರು.
ಈಗ ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಸಂವಿಧಾನದ ಮೇಲೆ ದಾಳಿ ನಡೆಯುತ್ತಿರುವಾಗ, ಪ್ರತಿಯೊಂದು ಸಂಸ್ಥೆಗಳು ಒಡೆಯುತ್ತಿರುವಾಗ, ರಾಷ್ಟ್ರಮಟ್ಟದಲ್ಲಿ ಸಂಘಟನಾ ಚುನಾವಣೆಗಳನ್ನು ನಡೆಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಉದಾಹರಣೆಯನ್ನು ಕಾಂಗ್ರೆಸ್ ಪ್ರಸ್ತುತಪಡಿಸಿದೆ. ಚುನಾವಣೆಗೆ ಸಂಬಂಧ ಪಟ್ಟ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು.

ತರೂರ್ ಅವರನ್ನು ಅಭಿನಂದಿಸಿದ ಅವರು, ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯುವ ವಿಧಾನಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದರು. ಖರ್ಗೆ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಲು ತರೂರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ನನ್ನ ಪಾಲುದಾರ ಶಶಿ ತರೂರ್ ಅವರನ್ನೂ ನಾನು ಅಭಿನಂದಿಸಲು ಬಯಸುತ್ತೇನೆ. ನಾವು ಚುನಾವಣೆಯಲ್ಲಿ ಪ್ರತಿನಿಧಿಗಳಾಗಿ ಸ್ಪರ್ಧಿಸಿದ್ದೇವೆ. ಅವರು ನನ್ನನ್ನು ಭೇಟಿ ಮಾಡಿದರು ಮತ್ತು ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂದು ನಾವು ಚರ್ಚಿಸಿದ್ದೇವೆ ಎಂದು ಖರ್ಗೆ ಹೇಳಿದರು. ಅಲ್ಲದೆ, ಖರ್ಗೆ ಅವರು ಶೀಘ್ರದಲ್ಲೇ ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.