ಸುಪ್ರೀಂಕೋರ್ಟ್‌ಗೆ ಹೋಗೋಣ ಬನ್ನಿ: ಮುಖ್ಯಮಂತ್ರಿಗಳಿಗೆ ಮಮತಾ ಬ್ಯಾನರ್ಜಿ ಕರೆ
ನವದೆಹಲಿ, ಆಗಸ್ಟ್ 26: ಕೊರೊನಾ ವೈರಸ್ ಭೀತಿಯ ನಡುವೆಯೂ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸಲಾಗುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು (ಎನ್‌ಇಇಟಿ) ಆಯೋಜಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
Recommended Video
ಈ ಪರೀಕ್ಷೆಗಳನ್ನು ಮುಂದೂಡುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಸಭೆ ನಡೆಸಿದ ಅವರು, ಇದರ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ಕರೆ ನೀಡಿದ್ದಾರೆ.
ಆನ್‌ಲೈನ್ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಕಾಂಗ್ರೆಸ್‌ನ ನಾಲ್ವರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

'ನಾವು ಸುಪ್ರೀಂಕೋರ್ಟ್‌ಗೆ ಹೋಗೋಣ. ಅಲ್ಲಿ ಈ ವಿಷಯದ ಬಗ್ಗೆ ಮಾತನಾಡೋಣ. ಇದು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವನ್ನು ನೀಡುವಂತಿದೆ. ಪ್ರಜಾಪ್ರಭುತ್ವದಲ್ಲಿ ಹಲವು ದೌರ್ಜನ್ಯಗಳನ್ನು ನಾನು ನೋಡಿರಲಿಲ್ಲ. ಈಗಿನ ಪರಿಸ್ಥಿತಿ ಬಹಳ ಗಂಭೀರವಾಗಿದೆ. ನಾವು ಮಕ್ಕಳಿಗಾಗಿ ಮಾತನಾಡಲೇಬೇಕಾಗಿದೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಒಂದು ವೇಳೆ ಜೆಇಇ/ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಮುಂದಾಗದೆ ಹೋದರೆ ರಾಜ್ಯಗಳು ಒಂದಾಗಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಮಮತಾ ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಮತಾ ಬ್ಯಾನರ್ಜಿ, ನೀಟ್ ಮತ್ತು ಜೆಇಇ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡುವ ಸಂಬಂಧ ಸುಪ್ರೀಂಕೋರ್ಟ್‌ಗೆ ಪರಾಮರ್ಶನಾ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.












Click it and Unblock the Notifications