Manipur Violence: ಸಹಜ ಸ್ಥಿತಿಯತ್ತ ಮಣಿಪುರ: 11 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ
ಭಾರಿ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದೆ. ಮಂಗಳವಾರ ಯಾವುದೇ ಅಹಿತ ಘಟನೆಗಳು ನಡೆದಿರುವುದು ವರದಿಯಾಗಿಲ್ಲ. ಗಲಭೆ ನಿಯಂತ್ರಣಕ್ಕೆ ಬಂದಿರುವ ಕಾರಣ ರಾಜ್ಯದ 11 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೂ 60 ಜನ ಸಾವನ್ನಪ್ಪಿದ್ದು, 231 ಮಂದಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಮಾಹಿತಿ ನೀಡಿದ್ದಾರೆ. ಅಲ್ಲದೆ ಹಿಂಸಾಚಾರದ ಸಂದರ್ಭದಲ್ಲಿ 1,7000 ಮನೆಗಳನ್ನು ಸುಟ್ಟುಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ವಲಯದಲ್ಲಿ ಮಂಗಳವಾರ ಮುಂಜಾನೆ 5 ಗಂಟೆಯಿಂದ 4 ಗಂಟೆಗಳ ಕಾಲ ಕರ್ಫ್ಯೂ ಸಡಿಲಸಲಾಗಿದೆ. ಉಳಿದ ಒಂಬತ್ತು ಜಿಲ್ಲೆಗಳಲ್ಲಿ ಕೂಡ ಕೆಲವು ಕಾಲ ಕರ್ಫ್ಯೂ ಸಡಿಲಿಕೆ ಮಾಡಲಾಗಿತ್ತು ಎಂದು ವರದಿಯಾಗಿದೆ.
ಪರಿಹಾರ ನೀಡುವ ಭರವಸೆ
ಮೇ 8ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರುಪಾಯಿ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 25,000 ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಘಟನೆಯ ಸಂದರ್ಭದಲ್ಲಿ ಧ್ವಂಸಗೊಂಡ ಮನೆಗಳನ್ನು ಪುನಃ ನಿರ್ಮಿಸಲು 2 ಲಕ್ಷ ರುಪಾಯಿ ನೀಡುವ ಭರವಸೆ ನೀಡಿದ್ದಾರೆ.
ಧ್ವಂಸಗೊಂಡಿರುವ ದೇವಸ್ಥಾನ ಮತ್ತು ಚರ್ಚ್‌ಗಳನ್ನು ಮರುನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದ 20 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ, ಇನ್ನೂ 10 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಗಲಭೆ ಸ್ಫೋಟಗೊಂಡಿತ್ತು.












Click it and Unblock the Notifications