Meghalaya Election Result 2023 : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹಿನ್ನಡೆ
ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ದಕ್ಷಿಣ ಶಿಲ್ಲಾಂಗ್ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಕಾಯ್ದುಕೊಂಡಿದ್ದಾರೆ.
ಶಿಲ್ಲಾಂಗ್, ಮಾರ್ಚ್ 02; ಮೇಘಾಲಯ ವಿಧಾನಸಭೆ ಚುನಾವಣೆ 2023ರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಎನ್‌ಪಿಪಿ 28 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾನ್ರಾಡ್ ಸಂಗ್ಮಾ ನೇತೃತ್ವದ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸುವ ಸುಳಿವು ಸಿಕ್ಕಿದೆ. ರಾಜ್ಯದ 60 ಕ್ಷೇತ್ರಗಳ ಪೈಕಿ 59 ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆದಿತ್ತು. ಬಿಜೆಪಿ ಹಿನ್ನಡೆ ಅನುಭವಿಸುವ ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷರೂ ಸಹ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ದಕ್ಷಿಣ ಶಿಲ್ಲಾಂಗ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕ್ಷೇತ್ರದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಪೌಲ್ ಲಿಂಗ್ಡಾನ್ ಸುಮಾರು 6 ಸಾವಿರ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಎನ್‌ಪಿಪಿಯ ಮೊಹೇಂದ್ರೋ ರಾಪ್‌ಸಂಗ್ ಇದ್ದು 2,920 ಮತಗಳನ್ನು ಪಡೆದಿದ್ದಾರೆ.

12 ಗಂಟೆಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಎನ್‌ಪಿಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಎನ್‌ಪಿಪಿ 23, ಬಿಜೆಪಿ ಮತ್ತು ಕಾಂಗ್ರೆಸ್ 5, ಯುಡಿಪಿ 8 ಸ್ಥಾನಗಳಲ್ಲಿ ಮುನ್ನಡೆ ಪಡೆದಿವೆ. 59 ಸ್ಥಾನಗಳಿಗೆ ಚುನಾವಣೆ ನಡೆದ ಕಾರಣ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 30. ಆಗಿದೆ.
ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಬಿಜೆಪಿ ಮೇಘಾಲಯ ವಿಧಾನಸಭೆ ಚುನಾವಣೆ 2023ರಲ್ಲಿ ಸ್ವತಂತ್ರವಾಗಿ ಕಣಕ್ಕಿಳಿದಿದೆ. ಎಲ್ಲಾ 60 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ಶಿಲ್ಲಾಂಗ್ ದಕ್ಷಿಣದಿಂದ ಸ್ಪರ್ಧಿಸಿದ್ದಾರೆ.
2018ರಲ್ಲಿ ಬಿಜೆಪಿ ರಾಜ್ಯದಲ್ಲಿ ಎರಡು ಸ್ಥಾನಗಳಲ್ಲಿ ಜಯಗಳಿಸಿತ್ತು. ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಮೈತ್ರಿಕೂಟಕ್ಕೆ ಚುನಾವಣಾ ಫಲಿತಾಂಶದ ಬಳಿಕ ಬೆಂಬಲ ನೀಡಿತ್ತು. ಇಬ್ಬರು ಶಾಸಕರ ಪೈಕಿ ಒಬ್ಬರಿಗೆ ಸಚಿವ ಸ್ಥಾನವನ್ನು ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೀಡಿದ್ದರು. ಆದರೆ ಪ್ರಮುಖ ಖಾತೆ ನೀಡಿಲ್ಲ ಎಂಬುದು ಬಿಜೆಪಿ ರಾಜ್ಯಾಧ್ಯಕ್ಷ ಅರ್ನಸ್ಟ್ ಮಾವ್ರಿ ಆರೋಪವಾಗಿತ್ತು.
ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಎನ್‌ಪಿಪಿ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡು ಪಕ್ಷಗಳು ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿವೆ. ಆದರೆ ಅರ್ನಸ್ಟ್ ಮಾವ್ರಿ ಎನ್‌ಪಿಪಿ ಅಭ್ಯರ್ಥಿಯಿಂದಲೇ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.












Click it and Unblock the Notifications