ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಕೇಂದ್ರದ ಪರೀಕ್ಷೆ ಬರೆಯಲು ಅವಕಾಶ
ನವದೆಹಲಿ, ಏಪ್ರಿಲ್ 15: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಶನಿವಾರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (CAPFs) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಮಹತ್ವದ ನಿರ್ಧಾರ ಮಾಡಿ ಒಪ್ಪಿಗೆ ನೀಡಿದೆ.
ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ಜನವರಿ 1, 2024 ರಿಂದ ನಡೆಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ನಡೆಸಲಾಗುತ್ತದೆ.

ಈ ನಿರ್ಧಾರವು ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳು ತಮ್ಮ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಯನ್ನು ಬರೆಯುವಂತೆ ಮಾಡುತ್ತದೆ ಮತ್ತು ಅವರ ಆಯ್ಕೆಯ ಭವಿಷ್ಯವನ್ನು ಸುಧಾರಿಸುತ್ತದೆ. ಸಿಎಪಿಎಫ್‌ನಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಕಾನ್ಸ್‌ಟೇಬಲ್ ಜಿಡಿ ಒಂದಾಗಿದೆ, ಇದು ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳನ್ನು ಆಕರ್ಷಿಸುತ್ತದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಸ್ಥಳೀಯ ಯುವಕರು ತಮ್ಮ ಮಾತೃಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳುವ ಈ ಅವಕಾಶವನ್ನು ಬಳಸಿಕೊಳ್ಳಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ವ್ಯಾಪಕ ಕ್ರಮವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಇಲಾಖೆ ಹೇಳಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಭಾಷೆಗಳ ಬಳಕೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಎಂಎಚ್‌ಎ ಹೇಳಿಕೆಯಲ್ಲಿ ತಿಳಿಸಿದೆ.
ಕನ್ನಡದಲ್ಲೂ ಸಿಎಪಿಎಫ್ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದ್ದಕ್ಕೆ ಕರ್ನಾಟಕ ಬಿಜೆಪಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದೆ. ಕನ್ನಡದಲ್ಲೂ ಸಿಎಪಿಎಫ್ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ನಮ್ಮ ಖ್ಯಾತ ನಾಯಕರಾದ ಪ್ರಧಾನಿ ನರೇಂದ್ರ ಹಾಗೂ ಅಮಿತ್ ಶಾ ಅವರಿಗೆ ಅವರಿಗೆ ಧನ್ಯವಾದಗಳು ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.
ಕರ್ನಾಟಕದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಪಡೆಯಲು ಸಹಾಯ ಮಾಡುವ ಈ ಕ್ರಮವು ಕನ್ನಡವನ್ನು ಉತ್ತೇಜಿಸುವ ಬಿಜೆಪಿಯ ಬದ್ಧತೆಯನ್ನು ಸೂಚಿಸುತ್ತದೆ ಎಂದು ಬಿಜೆಪಿ ಕರ್ನಾಟಕ ತಿಳಿಸಿದೆ. ಕಳೆದ ಏಪ್ರಿಲ್ 10ರಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದರು.
ಆದರೆ ಈಗ ಸಿಆರ್‌ಪಿಎಫ್ ಬದಲು ಮುಂದಿನ ವರ್ಷ ಜನವರಿಯಲ್ಲಿ ನಡೆಯಲು ಸಿಎಪಿಎಫ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದರು.












Click it and Unblock the Notifications