ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಯಾವ ರಾಜ್ಯಕ್ಕೆ ಅಗ್ರಸ್ಥಾನ?
ನವದೆಹಲಿ, ಆಗಸ್ಟ್ 31: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ರೂಪಾಂತರ ಅಲೆಗಳ ಭೀತಿ ನಡುವೆ 9 ರಿಂದ 10 ಗಂಟೆಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 227 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ 64 ಕೋಟಿಗೂ ಅಧಿಕ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 53,37,042 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.
ದೇಶದಲ್ಲಿ ಈವರೆಗೂ 63,99,01,822 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 63,09,30,270 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 10357664 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 8369624 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 18320807 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 13136776 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 492499609 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 147402213 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶಕ್ಕೆ ಅಗ್ರಸ್ಥಾನ:
ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಈವರೆಗೂ 7.04 ಕೋಟಿ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದು, ಈ ಪೈಕಿ ಶೇ.16ರಷ್ಟು ಅಂದರೆ 1.13 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರ ಗುರುತಿಸಿಕೊಂಡಿದ್ದು, ರಾಜ್ಯದಲ್ಲಿ 5.71 ಕೋಟಿ ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, ಅದರಲ್ಲಿ 1.54 ಕೋಟಿ ಜನರು ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರ ಹೊರತಾಗಿ ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಒಂದು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.
ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?
2021ರ ಆಗಸ್ಟ್ 31ರ ಅಂಕಿ-ಅಂಶಗಳ ಪ್ರಕಾರ, 63,09,30,270 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 63,09,30,270
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 21,76,930
* ಕೊವಿಡ್-19 ಲಸಿಕೆಯ ಲಭ್ಯತೆ - 4,87,39,946












Click it and Unblock the Notifications