ಭಾರತದಲ್ಲಿ ಒಂದೇ ದಿನ 64 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಸಪ್ಟೆಂಬರ್ 3: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.
ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 230 ದಿನಗಳಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 64,70,901 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 45,48,047 ಮಂದಿಗೆ ಮೊದಲ ಡೋಸ್ ಹಾಗೂ 19,22,854 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.
ಭಾರತದಲ್ಲಿ ಈವರೆಗೂ 66,17,38,647 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 64,65,07,160 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದವರಿಗೆ ಎಷ್ಟು ಲಸಿಕೆ ವಿತರಣೆ?:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,59,871 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 84,29,717 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,27,131 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,33,85,387 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 51,46,02,331 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,52,33,377 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.
ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?
2021ರ ಸಪ್ಟೆಂಬರ್ 3ರ ಅಂಕಿ-ಅಂಶಗಳ ಪ್ರಕಾರ, 64,65,07,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 64,65,07,160
* ಕೊವಿಡ್-19 ಲಸಿಕೆಯ ಲಭ್ಯತೆ - 4,78,94,030












Click it and Unblock the Notifications