Jharkhand Election: ಜಾರ್ಖಂಡ್ ಚುನಾವಣಾ ಅಖಾಡಕ್ಕೆ ಎಂಎಸ್ ಧೋನಿ!
ಎಂಎಸ್ ಧೋನಿ 2025ರ ಐಪಿಎಲ್ ಆವೃತ್ತಿಯಲ್ಲಿ ಕಣಕ್ಕಿಳಿಯುತ್ತಾರಾ ಇಲ್ಲವಾ ಎಂದು ಒಂದು ಕಡೆ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಸಿಎಸ್‌ಕೆ ತಂಡ ಕೂಡ ಧೋನಿ ಅವರನ್ನು ಈ ಆವೃತ್ತಿಯಲ್ಲಿ ಆಡಿಸಲು ಪ್ರಯತ್ನ ಮಾಡುತ್ತಿದೆ. ಅಭಿಮಾನಿಗಳಿಗೋಸ್ಕರ ಮತ್ತೊಂದು ಆವೃತ್ತಿಯಲ್ಲಿ ಆಡಲು ಧೋನಿ ಒಪ್ಪುವ ಸಾಧ್ಯತೆ ಇದೆ. ಈ ನಡುವೆ ಧೋನಿ ಜಾರ್ಖಂಡ್ ವಿಧಾನಸಭಾ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ, ಆದರೆ ರಾಜಕೀಯ ಮಾಡಲು ಅಲ್ಲ ಎನ್ನುವುದು ವಿಶೇಷ.
ಹೌದು, ಎಂಎಸ್ ಧೋನಿ ಜಾರ್ಖಂಡ್ ಚುನಾವಣೆಯಲ್ಲಿ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ. ವಿಧಾನಸಭಾ ಚುನಾವಣೆಗೆ ಧೋನಿ ತಮ್ಮ ಫೋಟೋ ಬಳಸಲು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಕೆ ರವಿಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಜಾಹೀರಾತುಗಳಲ್ಲಿ ತಮ್ಮ ಫೋಟೊ ಬಳಸಿಕೊಳ್ಳಲು ಎಂಎಸ್ ಧೋನಿ ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಇತರ ವಿವರಗಳಿಗಾಗಿ ನಾವು ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಮಹೇಂದ್ರ ಸಿಂಗ್ ಧೋನಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ ಎಂದುರವಿಕುಮಾರ್ ರಾಂಚಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸ್ವೀಪ್ (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಧೋನಿ ಕೆಲಸ ಮಾಡಲಿದ್ದಾರೆ. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಧೋನಿ ಮನವಿ ಮಾಡಲಿದ್ದಾರೆ. ಅವರ ಜನಪ್ರಿಯತೆಯನ್ನು ಬಳಸಿಕೊಂಡು ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ಯೋಜನೆ ರೂಪಿಸಿದೆ.
ಎರಡು ಹಂತದಲ್ಲಿ ಚುನಾವಣೆ
ಜಾರ್ಖಂಡ್‌ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 13ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, 43 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶುಕ್ರವಾರವೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ.
ಜಾರ್ಖಂಡ್ ವಿಧಾನಸಭೆಯ 81 ಸ್ಥಾನಗಳಿಗೆ ನವೆಂಬರ್ 13 ಮತ್ತು ನವೆಂಬರ್ 20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಸರೈಕೆಲಾ ಕ್ಷೇತ್ರದಿಂದ ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್, ಜೆಎಂಎಂ ನೇತೃತ್ವದ ಮೈತ್ರಿಕೂಟಕ್ಕೆ ಉಳಿಗಾಲವಿಲ್ಲ, ರಾಜ್ಯದ ಮತದಾರರು ಅವರನ್ನು ಸೋಲಿಸಲಿದ್ದಾರೆ ಎಂದು ಚಂಪೈ ಸೊರೆನ್ ಹೇಳಿದ್ದಾರೆ.
ಐಪಿಎಲ್‌ನಲ್ಲಿ ಆಡುವ ಸುಳಿವು
2025ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ಕಣಕ್ಕಿಳಿಯುವ ಸೂಚನೆ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ ಐಪಿಎಲ್‌ನಲ್ಲಿ ಮೊಣಕಾಲು ನೋವಿನ ನಡುವೆಯೂ ಅವರು ಕಣಕ್ಕಿಳಿದಿದ್ದರು. ಐಪಿಎಲ್ ಬಳಿಕ ಮೊಣಕಾಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು, ಸದ್ಯ ಫಿಟ್ ಆಗಿದ್ದಾರೆ. ವಿಕೆಟ್ ಕೀಪಿಂಗ್ ಮಾಡದೇ ಇದ್ದರೂ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುವ ಬಗ್ಗೆ ಯೋಜಿಸಿದ್ದಾರೆ ಎಂದು ಹೇಳಲಾಗಿದ್ದು, ಕೆಲವೇ ದಿನಗಳಲ್ಲಿ ಎಲ್ಲಾ ಕುತೂಹಲಗಳಿಗೆ ತೆರೆ ಬೀಳಲಿದೆ.












Click it and Unblock the Notifications