ಲೋಕಸಭಾ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಕುರಿತು ಮಹತ್ವದ ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ
ದೆಹಲಿ, ಡಿಸೆಂಬರ್ 21: ಸರಣಿ ಸೋಲು ಕಂಡ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದೆ. ಈ ಬಗ್ಗೆ ಪ್ರಧಾನಿ ಮೋದಿ ಭೇಟಿ ಬಳಿಕ ಹೆಚ್ ಡಿ ಕುಮಾರಸ್ವಾಮಿ ಮಹತ್ವದ ಮಾಹಿತಿ ನೀಡಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿಖಿಲ್ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ.
ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.

ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಕುಮಾರಸ್ವಾಮಿ ಅವರು; ಯಾರ ಹಣೆಯ ಮೇಲೆ ಏನ್ ಬರೆದಿದೆಯೋ ಅಂತ ಗೊತ್ತಿಲ್ಲಾ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.
ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಹಾಗೂ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಉರುಳುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ, ಅಜೀತ್ ಪವಾರ್ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ನೀಡಿದರು.
ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎನ್ನುವ ಪ್ರಶ್ನೆಗೂ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು, ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ನಾವು ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲಾ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.












Click it and Unblock the Notifications