ನಿರ್ಭಯಾ ಕೇಸ್ : 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ, ಸುಪ್ರೀಂ ಆದೇಶ
ನವದೆಹಲಿ, ಜುಲೈ 09: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮೂವರು ಅಪರಾಧಿಗಳು ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯ ತೀರ್ಪು ಇಂದು ಪ್ರಕಟವಾಗಿದೆ. ಸುಪ್ರೀಂಕೋರ್ಟಿನ ನ್ಯಾಯಪೀಠವು ಮಹತ್ವದ ಆದೇಶ ಹೊರಡಿಸಿದ್ದು, ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸಲಾಗಿದೆ.
ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಆರ್. ಭಾನುಮತಿ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಪ್ರಕರಣ ಕುರಿತ ತೀರ್ಪನ್ನು ನೀಡಿದೆ.

ಅಮಾನುಷ ಅತ್ಯಾಚಾರ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಪವನ್ ಗುಪ್ತಾ (31), ವಿನಯ್ ಶರ್ಮಾ (25) ಮತ್ತು ಮುಕೇಶ್ (31) ಅವರು ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿಯ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಮೇ 4ರಂದು ಕಾಯ್ದಿರಿಸಿತ್ತು. ಪ್ರಕರಣದ ಮತ್ತೊಬ್ಬ ಆರೋಪಿ ಅಕ್ಷಯ್ ಠಾಕೂರ್ (33) ಇನ್ನೂ ಮರುಪರಿಶೀಲನಾ ಅರ್ಜಿ ಸಲ್ಲಿಸಿಲ್ಲ.
2012ರ ಡಿಸೆಂಬರ್ 16ರಂದು ರಾತ್ರಿ ಸ್ನೇಹಿತನ ಜತೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೂ ಸೇರಿದಂತೆ ಆರು ಮಂದಿ ಕ್ರೂರವಾಗಿ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೆ ಸಿಂಗಪುರದ ಆಸ್ಪತ್ರೆಯಲ್ಲಿ ಡಿ.29ರಂದು ಮೃತಪಟ್ಟಿದ್ದಳು. ಆರು ಮಂದಿಯಲ್ಲಿ ರಾಮ್ ಸಿಂಗ್ ಎಂಬಾತ 2013ರಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗಲೇ ತಿಹಾರ್ ಜೈಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪರಾಧಿಯಾಗಿದ್ದರಿಂದ 3 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಉಳಿದ ಎಲ್ಲ ನಾಲ್ವರು ಅಪರಾಧಿಗಳಿಗೆ ತ್ವರಿತ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಬಳಿಕ ಎತ್ತಿಹಿಡಿದಿತ್ತು.












Click it and Unblock the Notifications