ಹರಿಯಾಣದಲ್ಲಿ ಕೋಮು ಗಲಭೆ: ಗುರುಗ್ರಾಮ, ಫರಿದಾಬಾದ್‌ಗೆ ಹಬ್ಬಿದ ಹಿಂಸಾಚಾರ- ಗುಂಡಿನ ದಾಳಿಯಲ್ಲಿ ಹೋಮ್ ಗಾರ್ಡ್ ಸಾವು
ನವದೆಹಲಿ, ಜುಲೈ 31: ಗುರುಗ್ರಾಮ್ ಬಳಿ ಇರುವ ನುಹ್ ಪಟ್ಟಣದಲ್ಲಿ ಎರಡು ಕೋಮುಗಳ ನಡುವೆ ಹಿಂಸಾಚಾರ ಭುಗಿಲೆದ್ದಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯನ್ನು ತಡೆಯಲು ಯುವಕರ ಗುಂಪೊಂದು ಯತ್ನಿಸಿತು. ಇದು ಹಿಂಸಾಚಾರಕ್ಕೆ ಕಾರಣವಾಯಿತು. ಗಲಭೆಯಲ್ಲಿ ಹೋಮ್ ಗಾರ್ಡ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ.
ಹಿಂಸಾಚಾರದ ಸಮಯದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಕಾರು ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ನುಹ್ ಹಿಂಸಾಚಾರವು ಗುರುಗ್ರಾಮ, ಪರೀದಾಬಾದ್ ಪಲ್ವಾಲ್‌ಗಳಿಗೆ ಹರಡಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ನುಹ್ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ತೀವ್ರ ಕೋಮು ಉದ್ವಿಗ್ನತೆಯನ್ನು ನಿಯಂತ್ರಿಸಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ನೆರೆಯ ಜಿಲ್ಲೆಗಳಿಂದ ಸರ್ಕಾರ ಹೆಚ್ಚುವರಿ ಪಡೆಗಳನ್ನು ರವಾನಿಸಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ. ನಾವು ಹೆಲಿಕಾಪ್ಟರ್ ಮೂಲಕ ಪಡೆಗಳನ್ನು ಕಳುಹಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿಎಚ್‌ಪಿಯ 'ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆ'ಯನ್ನು ನುಹ್‌ನ ಖೇಡ್ಲಾ ಮೋಡ್ ಬಳಿ ಯುವಕರ ಗುಂಪೊಂದು ತಡೆದಿದೆ. ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮೆರವಣಿಗೆಯ ಭಾಗವಾಗಿದ್ದ ಕನಿಷ್ಠ ನಾಲ್ಕು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲ ಪೊಲೀಸ್ ವಾಹನಗಳಿಗೂ ಹಾನಿಯಾಗಿದೆ.

ಇದೇ ಸಂದರ್ಭದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಆದರೆ, ಎಷ್ಟು ಜನರು ಗಾಯಗೊಂಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.
ಗುರುಗ್ರಾಮದ ಸಿವಿಲ್ ಲೈನ್ಸ್‌ನಿಂದ ಬಿಜೆಪಿ ಜಿಲ್ಲಾಧ್ಯಕ್ಷ ಗಾರ್ಗಿ ಕಕ್ಕರ್ ಯಾತ್ರೆಗೆ ಚಾಲನೆ ನೀಡಿದರು. ಮೆರವಣಿಗೆಯೊಂದಿಗೆ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು.
ಕೆಲ ಮಾಧ್ಯಮಗಳ ವರದಿ ಪ್ರಕಾರ, ಬಲ್ಲಭಗಢದಲ್ಲಿ ಬಜರಂಗದಳದ ಕಾರ್ಯಕರ್ತನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದಾನೆ. ಇದು ಘರ್ಷಣೆಗೆ ಪ್ರಚೋದಿಸಿದೆ.
ಗುರುಗ್ರಾಮದ ಸಿವಿಲ್ ಲೈನ್ಸ್‌ನಿಂದ ಬಿಜೆಪಿ ಜಿಲ್ಲಾಧ್ಯಕ್ಷ ಗಾರ್ಗಿ ಕಕ್ಕರ್ ಅವರು ಯಾತ್ರೆಗೆ ಚಾಲನೆ ನೀಡಿದರು. ಮೆರವಣಿಗೆಯೊಂದಿಗೆ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಗೃಹ ಸಚಿವ ವಿಜ್ ಹೇಳಿದ್ದಾರೆ.
'ಪರಿಸ್ಥಿತಿಯನ್ನು ಹತೋಟಿಗೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ಶಾಂತಿ ಕಾಪಾಡುವಂತೆ ನಾವು ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ' ಎಂದು ವಿಜ್ ಹೇಳಿದ್ದಾರೆ. ಪೊಲೀಸ್ ಮಹಾನಿರ್ದೇಶಕರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.












Click it and Unblock the Notifications