ಉತ್ತರ ಪ್ರದೇಶ ಕಾಲ್ತುಳಿತದಲ್ಲಿ 80 ಮಂದಿ ಸಾವು; ಗಣ್ಯರಿಂದ ಸಂತಾಪ
ಉತ್ತರ ಪ್ರದೇಶದಲ್ಲಿ ಮಂಗಳವಾರ ಘೋರ ದುರಂತವೊಂದು ನಡೆದಿದೆ. ಹತ್ರಾಸ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್, ಹತ್ರಾಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಕರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಎಂದು ಕರೆಯಲ್ಪಡುವ ಸ್ವಯಂ-ಘೋಷಿತ ದೇವಮಾನವ ನಾರಾಯಣ ಸಾಕರ್ ಹರಿಗಾಗಿ ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್ ಸಮಿತಿಯು ಸತ್ಸಂಗವನ್ನು ಆಯೋಜಿಸಿತ್ತು ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಸಂತಾಪ
ಈ ಘೋರ ದುರಂತ ಇಡೀ ಉತ್ತರ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಘಟನೆ ಬಗ್ಗೆ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರು ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ, ಅವರ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ಹೇಳಿದ್ದಾರೆ.
ಸಂಸತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಹತ್ರಾಸ್‌ನಲ್ಲಿ ದುರಂತ ಸಾವಿನ ಸುದ್ದಿ ಬರುತ್ತಿದೆ, ಪ್ರಾಣ ಕಳೆದುಕೊಂಡವರಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕೇಂದ್ರ ಸರ್ಕಾರದಿಂದ ಎಲ್ಲಾ ಸಹಾಯ ನೀಡಲಾಗುವುದು" ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿ, "ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ" ಎಂದಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ನಾಳೆ ಹತ್ರಾಸ್ ಗೆ ಭೇಟಿ ನೀಡಲಿದ್ದಾರೆ.
ಘಟನೆಯ ಕಾರಣವನ್ನು ತನಿಖೆ ಮಾಡಲು ಆಗ್ರಾ ಮತ್ತು ಅಲಿಘರ್ ಕಮಿಷನರ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ.
ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, "ಸತ್ಸಂಗದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮೊದಲೇ ಸೂಚನೆ ನೀಡಿದ್ದರಿಂದ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ" ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿ, "ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸರ್ಕಾರ ಮತ್ತು ಆಡಳಿತವು ಸಾಧ್ಯವಿರುವ ಎಲ್ಲ ಚಿಕಿತ್ಸೆ ನೀಡಬೇಕು, ಪರಿಹಾರ ಕೊಡಬೇಕು" ಎಂದು ಮನವಿ ಮಾಡಿದ್ದಾರೆ.












Click it and Unblock the Notifications