ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ರೈಲ್ವೆ ನಿಲ್ದಾಣ ಕುಸಿತ
ಉತ್ತರ ಪ್ರದೇಶದ ಕನ್ನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದೆ. ಎರಡು ಅಂತಸ್ತಿನ ಕಟ್ಟಡದ ಸೌಂದರ್ಯೀಕರಣ ಮಾಡಲು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಟ್ಟಡ ಕುಸಿದ ಸಮಯದಲ್ಲಿ ಸುಮಾರು 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರೈಲ್ವೆ ಅಧಿಕಾರಿಗಳು, ಪೊಲೀಸರು ಮತ್ತು ಆಡಳಿತ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಈವರೆಗೆ 23 ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಛಾವಣಿಯ ನಿರ್ಮಾಣ ಹಂತದ ಭಾಗವು ಕುಸಿದಾಗ ಈ ಘಟನೆ ನಡೆದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಶುಭ್ರಂತ್ ಕುಮಾರ್ ಶುಕ್ಲ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಸಿಕ್ಕಿಬಿದ್ದಿರುವ ಕಾರ್ಮಿಕರ ರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವವರಿಗೆ 50,000 ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 5,000 ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಲಕ್ನೋದಿಂದ ರಾಜ್ಯ ವಿಪತ್ತು ಪರಿಹಾರ ಪಡೆ (SDRF) ಸ್ಥಳಕ್ಕೆ ಆಗಮಿಸಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ ಎಂದು ಈಶಾನ್ಯ ರೈಲ್ವೆ ಮಾಹಿತಿ ನೀಡಿದೆ.
ಸಿಸಿಟಿವಿ ವಿಡಿಯೋ ವೈರಲ್
ನಿರ್ಮಾಣ ಹಂತದ ಕಟ್ಟಡ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೋ ವೈರಲ್ ಆಗುತ್ತಿದೆ. ಕಟ್ಟಡ ಕುಸಿಯುವ ಸಂದರ್ಭದಲ್ಲಿ ಸಮೀಪವೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗುವದನ್ನು ನೋಡಬಹುದು. ಕಟ್ಟಡ ಕುಸಿಯುವ ಕೆಲವೇ ಸೆಕೆಂಡ್ ಮೊದಲು ಆ ವ್ಯಕ್ತಿ ಬಿಲ್ಡಿಂಗ್‌ನ ಕೊನೆಯಲ್ಲಿ ನಡೆದುಕೊಂಡು ಹೋಗುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ.
ಅವರು ಮೇಲಕ್ಕೆ ನೋಡಿದಾಗ ನಿರ್ಮಾಣ ಹಂತದ ಛಾವಣಿಗೆ ಹಾಕಿದ್ದ ಸೆಂಟ್ರಿಂಗ್ ಕುಸಿದು ಬೀಳುತ್ತಿತ್ತು, ತಕ್ಷಣವೇ ಎಚ್ಚೆತ್ತ ಆ ವ್ಯಕ್ತಿ ಅಲ್ಲಿಂದ ದೂರ ಓಡಿಹೋಗಿದ್ದಾರೆ. ಅಪಘಾತದ ಸಮಯದಲ್ಲಿ, ಅಟಲ್ ಮಿಷನ್ ಫಾರ್ ರಿಜುವನೇಷನ್ ಅಂಡ್ ಅರ್ಬನ್ ಟ್ರಾನ್ಸ್‌ಫರ್ಮೇಷನ್ (AMRUT) ಅಡಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ರೈಲ್ವೆ ನಿಲ್ದಾಣಕ್ಕಾಗಿ 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಇದರಲ್ಲಿ 23 ಜನರನ್ನು ರಕ್ಷಣೆ ಮಾಡಲಾಗಿದ್ದು, 20 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಅಸಿಮ್ ಅರುಣ್ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಘಟನೆ ಬಗ್ಗೆ ಸಮಗ್ರ ತನಿಖೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications