ಮಹಿಳೆಯರ ಮೇಲೆ ದೌರ್ಜನ್ಯ ಸಹಿಸಲ್ಲ; ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸುವುದಿಲ್ಲ ಎಂದಿದ್ದಾರೆ. ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂದಪಟ್ಟಂತೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ಸಿಟ್ಟು ಹೊರಹಾಕಿದ್ದಾರೆ. ಸಮಾಜವಾಗಿ ನಾವು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು ಎಂದು ಹೇಳಿದ್ದಾರೆ.

ವಾಯುಪಡೆ, ಸೇನೆ, ನೌಕಾಪಡೆ ಮತ್ತು ಬಾಹ್ಯಾಕಾಶ ಕ್ಷೇತ್ರ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಮಹಿಳೆಯರ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಮಹಿಳೆಯರು ಸ್ವಾವಲಂಬನೆ ಕಡೆ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲೇ ಕೆಲವು ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಕೆಂಪು ಕೋಟೆಯಿಂದ ನಾನು ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ಸಮಾಜವಾಗಿ ನಾವು ಇಂತಹ ವಿಚಾರಗಳ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದರು.
ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು
ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲಿನ ದೌರ್ಜನ್ಯದ ಬಗ್ಗೆ ಸಾರ್ವಜನಿಕರ ಆಕ್ರೋಶವಿದೆ. ದೇಶ, ಸಮಾಜ, ನಮ್ಮ ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಆದಷ್ಟು ಬೇಗ ತನಿಖೆಯಾಗಬೇಕು, ರಾಕ್ಷಸ ಕೃತ್ಯಗಳನ್ನು ಎಸಗುವವರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ, ಸಮಾಜದಲ್ಲಿ ನಂಬಿಕೆ ಮೂಡಿಸುವ ಕೆಲಸವಾಗಬೇಕು ಎಂದರು.
ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಮಾಧ್ಯಮಗಳಲ್ಲಿ ಇದರ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತದೆ. ಆದರೆ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾದಾಗ ಅಷ್ಟು ಸುದ್ದಿಯಾಗುವುದಿಲ್ಲ, ಕೃತ್ಯ ಎಸಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಬೇಕು, ಶಿಕ್ಷೆಯಾದಾಗ ಇದರ ಬಗ್ಗೆ ಹೆಚ್ಚು ಚರ್ಚೆ ನಡೆಯಬೇಕು ಎಂದು ಹೇಳಿದರು. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಪ್ರಕರಣ ಸಿಬಿಐಗೆ ವರ್ಗಾವಣೆ
ವೈದ್ಯೆ ಅತ್ಯಾಚಾರ ಮತ್ತ ಹತ್ಯೆ ಪ್ರಕರಣದಲ್ಲಿ ಕೋಲ್ಕತಾ ಪೊಲೀಸರು ಯಾವುದೇ ಪ್ರಗತಿ ಸಾಧಿಸಿಲ್ಲ ಮತ್ತು ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿರುವ ಕೋಲ್ಕತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.
ಪ್ರಕರಣವನ್ನು ಸಿಬಿಐಗೆ ವಹಿಸಿದ್ದರ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದು, ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಆದರೆ ಪ್ರಕರಣವನ್ನು ಇಟ್ಟುಕೊಂಡು ಬಂಗಾಳದ ಮಾನ ಕಳೆಯಲು ಯತ್ನಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications