ಕರ್ನಾಟಕ, ರಾಜಸ್ಥಾನ ಕಾಂಗ್ರೆಸ್ ಸರ್ಕಾರಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ
ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಪುಣೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ಪುಣೆಯಲ್ಲಿ ಎರಡು ಹೊಸ ಪುಣೆ ಮೆಟ್ರೋ ರೈಲುಗಳಿಗೆ ಚಾಲನೆ ನೀಡಿದ ನಂತರ ಮತ್ತು 15,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಟೀಕಿಸಿದರು.

ಬೆಂಗಳೂರು ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಇದೇ ರೀತಿಯಾಗಿ ರಾಜಸ್ಥಾನದಲ್ಲಿ ರಾಜ್ಯವು ದೊಡ್ಡ ಸಾಲದಲ್ಲಿದೆ ಮತ್ತು ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಸ್ವಾರ್ಥಕ್ಕಾಗಿ ಖಜಾನೆ ಖಾಲಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಿಸಿದ ಪ್ರಧಾನಿ ಮೋದಿ, ಬೆಂಗಳೂರು ಜಾಗತಿಕ ಹೂಡಿಕೆದಾರರ ಕೇಂದ್ರ ಮತ್ತು ಐಟಿ ಕೇಂದ್ರವಾಗಿದೆ, ಆದರೆ ರಾಜ್ಯ ಸರ್ಕಾರದ ಘೋಷಣೆಯ ದುಷ್ಪರಿಣಾಮಗಳು ಕಡಿಮೆ ಸಮಯದಲ್ಲೇ ಕಂಡು ಬರುತ್ತಿವೆ ಎಂದು ಹೇಳಿದರು.
ಯಾವುದೇ ಪಕ್ಷವು ತನ್ನ ಸ್ವಾರ್ಥಕ್ಕಾಗಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದರೆ ಅದರ ಭಾರವನ್ನು ಜನರೇ ಹೊರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕೆ ಮಾಡಿದ್ದಾರೆ.
ರಾಜಸ್ಥಾನದ ಬಗ್ಗೆಯೂ ಟೀಕೆ
ರಾಜಸ್ಥಾನದಲ್ಲಿ ಕೂಡ ಇದೇ ಪರಿಸ್ಥಿತಿ ಇದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಉಚಿತ ಕೊಡುಗೆಗಳಿಂದ ಅಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಹಣ ಇಲ್ಲದೇ ಅನೇಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.
ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನ
ಇನ್ನು ಮಂಗಳವಾರ ಪುಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಿಲಕ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿರುವುದು ನನಗೆ ಗೌರವ ತಂದಿದೆ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಮೋದಿ ಹೇಳಿದರು. ನಮಾಮಿ ಗಂಗೆ ಯೋಜನೆಗೆ ತಮ್ಮ ಬಹುಮಾನದ ಮೊತ್ತ 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದರು.
ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿ ಶರದ್ ಪವಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ರಾಷ್ಟ್ರ ರಾಜಕಾರಣದಲ್ಲಿ ಇದು ಭಾರಿ ಕುತೂಹಲ ಕೆರಳಿಸಿದೆ. ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಪುಣೆಯ ದಗ್ದುಶೇತ್ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು.












Click it and Unblock the Notifications