ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಭಾಗಿಯಾಗಲಿದ್ದಾರೆ.
ನವದೆಹಲಿ, ಫೆಬ್ರವರಿ. 23: ರಾಷ್ಟ್ರ ರಾಜಧಾನಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಫೆಬ್ರವರಿ 25 ರಂದು ಎರಡು ದಿನಗಳ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಏಕ ಭಾರತ ಶ್ರೇಷ್ಠ ಭಾರತ'ದ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು 'ಬಾರಿಸು ಕನ್ನಡ ಡಿಂಡಿಮವ' ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ಉದ್ಘಾಟಿಸಿ ಪ್ರಧಾನಿ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಪಟಿಕಪುರ ನಂಜಾವಧೂತ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ದೊರೆತಿದೆ.
ಉದ್ಘಾಟನಾ ದಿನದಂದು ಧರ್ಮಸ್ಥಳದ ಡಿ ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ಮುಖಂಡ ಸಿ.ಟಿ ರವಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆಬ್ರವರಿ 26 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಉಪಸ್ಥಿತರಿರುತ್ತಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ.ನಾಗರಾಜು, ಆಜಾದಿ ಕಾ ಅಮೃತ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವದ ಎರಡು ದಿನಗಳ ಆಚರಣೆಗಳು ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕವನ ವಾಚನದ ಮೂಲಕ ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತವೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 1,000ಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ. ಸರಿಸುಮಾರು 10,000 ದಿಂದ 12,000 ಕನ್ನಡಿಗರು ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದ್ದಾರೆ, ಅದರಲ್ಲಿ ಸುಮಾರು 3,500 ದೆಹಲಿ ಕರ್ನಾಟಕ ಸಂಘದ ಸದಸ್ಯರಾಗಿದ್ದಾರೆ ಎಂದಿದ್ದಾರೆ.

ಇನ್ನು, ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರುಗಳು ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದಾರೆ. "ಕರ್ನಾಟಕ ಸಂಘವು ಇದುವೇ ಫೆಬ್ರವರಿ 25 ಮತ್ತು 26, ರಂದು ಆಚರಿಸುತ್ತಿರುವ ಸುವರ್ಣ ಮಹೋತ್ಸವ ಆಚರಣೆಯು ಸಂಘದ ಮೂಲ ಉದ್ದೇಶದಿಂದ ಬಹಳ ದೂರ ಸರಿದಿದೆ ಎಂದು ನಾವು ಭಾವಿಸುತ್ತೇವೆ. ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಯ ಸಮಾವೇಶವಾಗಬೇಕಾಗಿದ್ದ ಸುವರ್ಣ ಸಂಭ್ರಮವು ದೆಹಲಿ ಕನ್ನಡಿಗರನ್ನು ಕೇಂದ್ರದಲ್ಲಿರಿಸಿಕೊಂಡು ನಡೆಯುತ್ತಿಲ್ಲ" ಎಂದು ಮಾಜಿ ಅಧ್ಯಕ್ಷರು ಆರೋಪಿಸಿದ್ದಾರೆ.
"ಕನ್ನಡ ನಾಡು ನುಡಿಗೆ ಸೇವೆಸಲ್ಲಿಸಿದ ಲೇಖಕ, ಕಲಾವಿದರು ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಕಾಣುತ್ತಿಲ್ಲ. ಕಾರ್ಯಕ್ರಮದ ಒಟ್ಟು ಆಯೋಜನೆಯಲ್ಲಿ ಸಂಘದ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುವ ವಿಚಾರವಾಗಿದೆ. ಕಾರ್ಯಕಾರೀ ಸಮಿತಿಯ ಕೆಲವು ಸದಸ್ಯರಿಗೂ ವಿಷಯ ಸ್ಪಷ್ಟತೆಯಿಲ್ಲ. ಹಣಕಾಸಿನ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡಿಲ್ಲ. ಇಂಥ ಹಲವು ಕಾರಣಗಳಿಂದಾಗಿ ನಾವು ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಣಯಿಸಿದ್ದೇವೆ" ಎಂದು ಸಂಘದ ಮಾಜಿ ಅಧ್ಯಕ್ಷರುಗಳಾದ ಡಾ. ಪುರುಷೋತ್ತಮ ಬಿಳಿಮಲೆ, ಡಾ. ವೆಂಕಟಾಚಲ ಹೆಗಡೆ ಮತ್ತು ವಸಂತ ಶೆಟ್ಟಿ ಬೆಳ್ಳಾರೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.












Click it and Unblock the Notifications